ಮೋದಿ ಭೇಟಿ ಮಾಡಿದ ಕೇಜ್ರಿ

ನವದೆಹಲಿ, ಮಾ. ೩- ಮೂರನೇ ಬಾರಿ ದೆಹಲಿಯ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ ಅರವಿಂದ್ ಕೇಜ್ರಿವಾಲ್ ಅವರು ಪ್ರಥಮ ಬಾರಿಗೆ ಇಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಇದಕ್ಕೂ ಮೊದಲು ದೆಹಲಿ ಸಿಎಂ ಕೇಜ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಆಪ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದ ನಂತರ ಕಳೆದ ತಿಂಗಳು ಭೇಟಿಯಾಗಿದ್ದರು. ಕಳೆದ ಫೆ. ೧೬ ರಂದು ದೆಹಲಿ ಮುಖ್ಯಮಂತ್ರಿಯಾಗಿ ಕೇಜ್ರಿ ಪ್ರಮಾಣವಚನ ಸ್ವೀಕರಿಸಿದ್ದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಮಂತ್ರಿ ಮೋದಿ ಅವರಿಗೂ ಆಹ್ವಾನ ನೀಡಲಾಗಿತ್ತಾದರೂ ಮೋದಿ ಕೇಜ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಪ್ರಧಾನಮಂತ್ರಿ ನರೇಂದ್ರಮೋದಿ ಅವರು ತಮ್ಮ ವಾರಣಸಿ ಲೋಕಸಭಾ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಉದ್ಘಾಟಿಸಿದ್ದರು.
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕೇಂದ್ರದೊಂದಿಗೆ ಕೈಜೋಡಿಸಿ ಕೆಲಸ ಮಾಡುವ ಮೂಲಕ ದೆಹಲಿಯನ್ನು ಅಭಿವೃದ್ಧಿಪಡಿಸಲಾಗುವುದು ಹಾಗೂ ಮೋದಿ ಅವರ ಆಶೀರ್ವಾದ ನಮ್ಮ ಮೇಲಿರಲಿದೆ ಎಂದಿದ್ದರು.
ಟ್ವೀಟ್ ಮೂಲಕ ದೆಹಲಿ ಮುಖ್ಯಮಂತ್ರಿಯಾಗಿ ೩ನೇ ಬಾರಿಗೆ ಅರವಿಂದ್ ಕೇಜ್ರಿವಾಲ್ ಅಧಿಕಾರ ಸ್ವೀಕರಿಸುವ ಒಂದು ದಿನಕ್ಕೂ ಮುಂಚಿತವಾಗಿ ಶುಭಾಶಯ ಕೋರಿದ್ದರು. ಮೋದಿ ಅವರ ಈ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಕೇಜ್ರಿ, ಮೋದಿ ಅವರು ಹೆಚ್ಚು ಕೆಲಸದ ಒತ್ತಡದಿಂದ ಬರಲಾಗಿಲ್ಲ ಎನ್ನುವುದನ್ನು ಅರ್ಥ ಮಾಡಿಕೊಳ್ಳುತ್ತೇನೆ. ಆದರೆ, ಕೇಂದ್ರ ಮತ್ತು ದೆಹಲಿ ಸರ್ಕಾರ ದೆಹಲಿಯನ್ನು ಇಡೀ ಭಾರತದಲ್ಲೇ ಉತ್ತಮ ನಗರವನ್ನಾಗಿಸುವ ನಿಟ್ಟಿನಲ್ಲಿ ಕೈಜೋಡಿಸಿ ಕೆಲಸ ಮಾಡಬೇಕಿದೆ ಎಂದರು.

Leave a Comment