ಯುಜಿಸಿ ಮರು ಮಾನ್ಯತೆಗೆ ಆಗ್ರಹ

(ನಮ್ಮ ಪ್ರತಿನಿಧಿಯಿಂದ)
ಬೆಂಗಳೂರು, ಜ. ೧೩- ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಯುಜಿಸಿ ರದ್ದುಪಡಿಸಿ ಎರಡು ವರ್ಷ ಕಳೆದಿದ್ದರೂ ಮರು ಮಾನ್ಯತೆಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಯಾವುದೇ ಪ್ರಯತ್ನ ಮಾಡದಿರುವುದು ಖಂಡನೀಯ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಶೀಘ್ರವೇ ಮಾನ್ಯತೆ ದೊರಕಿಸಿಕೊಡಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ನಗರದಲ್ಲಿಂದು ಪ್ರತಿಭಟನೆ ನಡೆಸಿತು.

ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ಸ್ವತಂತ್ರ ಆಯೋಗವನ್ನು ರಚಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಅದರ ಬದಲು ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತೊಂದರೆ ಮಾಡುವುದು ಸರಿಯಲ್ಲ ಎಂದು ವೇದಿಕೆಯ ಅಧ್ಯಕ್ಷ ಮಹಮದ್ ತಫೀಸಿರ್, ಉಪಾಧ್ಯಕ್ಷ ಮಹಮದ್ ಮುಸೋವ್ ವೀರ್ ಹಾಗೂ ಕಾರ್ಯದರ್ಶಿ ಫೈಯಾಸ್ ದೊಡ್ಮನೆ ಅವರು ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಶೀಘ್ರ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಉಭಯ ಸರ್ಕಾರಗಳು ಯುಜಿಸಿ ಜತೆ ಚರ್ಚೆ ನಡೆಸಬೇಕು. ಕೋರ್ಸ್‌ಗಳನ್ನು ಪುನಃ ಆರಂಭಿಸಲು ಮಾನ್ಯತೆ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರವಚನ ಮಾಡಬೇಕು. ಈ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಹಿತ ಕಾಪಾಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ವಿಶ್ವವಿದ್ಯಾಲಯದ ಮಾನ್ಯತೆ ರದ್ದು ಮಾಡಿರುವುದರಿಂದ ಪದವಿ ಪಡೆದ ವಿದ್ಯಾರ್ಥಿಗಳು ಉದ್ಯೋಗ ಪಡೆಯುವ ಅವಕಾಶವನ್ನು ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಧ್ಯ ಪ್ರವೇಶಿಸಿ ಯುಜಿಸಿಯೊಂದಿಗೆ ಚರ್ಚೆ ನಡೆಸಿ ಮಾನ್ಯತೆ ದೊರಕಿಸಲು ಪ್ರಯತ್ನ ಮಾಡಬೇಕು ಎಂದು ಹೇಳಿದರು.

ವಿಶ್ವವಿದ್ಯಾಲಯ ಅನಗತ್ಯವಾಗಿ ಹಾಗೂ ಅನುಮತಿ ಪಡೆಯದೇ ಕೆಲ ತಾಂತ್ರಿಕ ಕೋರ್ಸ್‌ಗಳಿಗೆ ಅವಕಾಶ ನೀಡಿರುವುದೇ ಇಂತಹ ಸಮಸ್ಯೆಗೆ ಕಾರಣ. ಹೀಗಾಗಿ ಸರ್ಕಾರ ಯುಜಿಸಿಗೆ ಅಗತ್ಯ ದಾಖಲೆ ಸಲ್ಲಿಸಿ ಮಾನ್ಯತೆಗೆ ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.

ಮಧ್ಯ ಪ್ರವೇಶಕ್ಕೆ ಆಗ್ರಹ
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ತಜ್ಞ ಪ್ರೊ. ನಿರಂಜನಆರಾಧ್ಯ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟವಾಡುವುದು ಸರಿಯಲ್ಲ. ಹೀಗಾಗಿ ಕೂಡಲೇ ಸರ್ಕಾರಗಳು ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
ಅನಗತ್ಯವಾಗಿ ಕೋರ್ಸ್‌ಗಳನ್ನು ತೆರೆಯುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದೆ ಸಮಸ್ಯೆಗೆ ಕಾರಣವಾಗಿದೆ. ಸಮಸ್ಯೆ ಬಗೆಹರಿಸಲು ಮುಂದಾಗುವ ಅಗತ್ಯವಿದೆ ಎಂದು ಹೇಳಿದರು.

Leave a Comment