ರಾಜ್ಯ ಸರ್ಕಾರದ ಗೃಹ ಮಂತ್ರಿಗಳ ದಬ್ಬಾಳಿಕೆ, ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ

ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ : ರಾಜ್ಯಪಾಲರಿಗೆ ಮನವಿ
ಮೈಸೂರು. ಮೇ.6: ರಾಜ್ಯ ಸರ್ಕಾರದ ಗೃಹ ಮಂತ್ರಿಗಳ ದಬ್ಬಾಳಿಕೆ, ಅಭಿವ್ಯಕ್ತಿ ಸ್ವಾತಂತ್ರ್ಯ ಹರಣದ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ, ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮೈಸೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗ ಇಂದು ಬೆಳಿಗ್ಗೆ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಕಳೆದ ಕೆಲವು ತಿಂಗಳುಗಳಿಂದಲೂ ಸಮ್ಮಿಶ್ರ ಸರ್ಕಾರ ಮಾಧ್ಯಮ ಸೇರಿದಂತೆ ರಾಜ್ಯದ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ದೂರು ನೀಡಿದ್ದರೂ ಯಾವುದೇ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿಲ್ಲ. ಜೆಡಿಎಸ್ ಶಾಸಕ ನಾರಾಯಣ ಗೌಡ ನಟರಾದ ಯಶ್ ಮತ್ತು ದರ್ಶನ್ ಗೆ ನೇರವಾಗಿ ಬೆದರಿಕೆ ಹಾಕಿದ್ದರು. ಈ ಎರಡೂ ಪ್ರಕರಣಗಳಲ್ಲಿ ಜನರ ನಡುವೆ ದ್ವೇಷದ ವಾತಾವರಣ ಮೂಡಿಸಿ ಸಾಮಾಜಿಕ ಸಾಮರಸ್ಯ ಕೆಡಿಸುವಂತಹ ಗಂಭೀರ ಅಪಾಯವಿದ್ದರೂ ಈ ಬಗ್ಗೆ ಕ್ರಮ ಕೈಗೊಳ್ಳದೇ ಪಕ್ಷಪಾತ ಧೋರಣೆ ತೋರುತ್ತಿದೆ. ರಾಜ್ಯದಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಮ್ಮಿಶ್ರ ಸರ್ಕಾರ ಸಿಂಹ ಸ್ವಪ್ನವಾಗಿದೆ. ಸರ್ಕಾರವನ್ನಾಗಲೀ, ಮಂತ್ರಿಗಳನ್ನಾಗಲೀ ಟೀಕಿಸುವುದೇ ಅಪರಾಧ ಎನ್ನುವಂತಾಗಿದೆ. ಟೀಕಿಸಿದ ವಿರೋಧ ಪಕ್ಷಗಳು ಮತ್ತು ಮುಖಂಡರು, ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಭಯದ ವಾತಾವರಣ ಮೂಡಿಸಲಾಗುತ್ತಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿಯ ಕರಾಳ ನೆನಪು ಮರುಕಳಿಸುವಂತಹ ಹಲವಾರು ಪ್ರಕರಣಗಳು ನಡೆದಿವೆ ಎಂದರು. ಸ್ವತಃ ಮುಖ್ಯಮಂತ್ರಿಗಳು ಮಾಧ್ಯಮ ಪ್ರತಿನಿಧಿಗಳನ್ನು ದೂಷಿಸುವುದು, ಮಾಧ್ಯಮಗಳನ್ನು ಬಹಿಷ್ಕರಿಸುವುದಾಗಿ ಹೇಳಿಕೆ ನೀಡುವುದು, ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಮಾಧ್ಯಮಗಳನ್ನು ನಿಯಂತ್ರಿಸುವ ಸರ್ವಾಧಿಕಾರಿ ಮನೋಭಾವದ ಪ್ರತೀಕವಾಗಿದೆ. ರಾಜ್ಯ ಸರ್ಕಾರದ ಧೋರಣೆಯೇ ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಿದೆ ಎಂದು ಆರೋಪಿಸಿದರು.
ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿ ಹಿತೈಷಿಗಳು ಮತ್ತು ಹಿರಿಯ ಪತ್ರಕರ್ತರನ್ನು ಕಾರಾಗೃಹಕ್ಕೆ ಕಳುಹಿಸಲು ಸ್ವತಃ ರಾಜ್ಯದ ಮುಖ್ಯಮಂತ್ರಿಗಳೇ ವಿಶೇಷ ಆಸಕ್ತಿ ವಹಿಸಿದ್ದರು ಎಂದು ಗಂಭೀರವಾಗಿ ಆರೋಪಿಸಿದರು. ಮಹೇಶ್ ವಿಕ್ರಮ್ ಹೆಗ್ಡೆ, ಶ್ರತಿ ಬೆಳ್ಳಕ್ಕಿ, ಶಾರದಾ ಡೈಮಂಡ್, ಹೇಮಂತ್ ಕುಮಾರ್ ಮತ್ತು ಅಜಿತ್ ಶೆಟ್ಟಿ ಹೇರಂಜಿ ಅವರ ಮೇಲೆ ನಿರಾಧಾರ ಪ್ರಕರಣಗಳನ್ನು ದಾಖಲಿಸಿ ಮಾನಸಿಕವಾಗಿ ಕಿರುಕುಳ ನೀಡಲಾಗಿದೆ. ಇವರೆಲ್ಲರೂ ಬಿಜೆಪಿ ಬಗ್ಗೆ ಅಭಿಮಾನ ಹೊಂದಿದ್ದಾರೆಂಬ ಕಾರಣಕ್ಕೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿ ಇವರ ವಿರುದ್ಧ ಸೇಡಿನ ಕ್ರಮ ಜರುಗಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೇಮಂತ್ ಕುಮಾರ್ ಅವರು ಗೃಹ ಸಚಿವ ಎಂ.ಬಿ.ಪಾಟೀಲ್ ಬರೆದಿದ್ದಾರೆನ್ನಲಾದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಕಳುಹಿಸಿದ ಕಾರಣಕ್ಕೆ ಬಂಧಿತರಾದರು. ಬಿಜೆಪಿಯ ಬಗ್ಗೆ ಒಲವು ಹೊಂದಿರುವುದೇ ಅಪರಾದ ಎನ್ನುವಂತೆ ಪ್ರಕರಣದಲ್ಲಿ ಸ್ವತಃ ಗೃಹಮಂತ್ರಿಗಳು ವಿಶೇಷ ಆಸಕ್ತಿ ತೋರಿದ್ದಾರೆ. ಎಂ.ಬಿ.ಪಾಟೀಲ್ ಅವರೇ ಲಿಂಗಾಯತ ಧರ್ಮ ವಿಭಜನೆಯ ಯತ್ನದಲ್ಲಿ ಖುದ್ದು ಶಾಮೀಲಾಗಿದ್ದರು. ಆದರೆ ಈಗ ಅವರೇ ಇತರರ ವಿರುದ್ಧ ಕ್ರಮಕ್ಕೆ ಪೊಲೀಸ್ ವ್ಯವಸ್ಥೆಯ ದುರ್ಬಳಕೆ ಮಾಡುತ್ತಿದ್ದಾರೆಂದು ಆರೋಪಿಸಿದರು.
ಸಮ್ಮಿಶ್ರ ಸರ್ಕಾರ ವಿರೋಧಿಸುವವರ ಧ್ವನಿ ಅಡಗಿಸುವ ಇಂತಹ ಕೃತ್ಯಗಳ ಜೊತೆಗೆ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವು ತಮ್ಮ ಮೂಗಿನಡಿಯೇ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಕೂಡ ದಿವ್ಯ ಮೌನಕ್ಕೆ ಶರಣಾಗಿರುವುದು ಹಲವು ಅನುಮಾನ ಹುಟ್ಟುಹಾಕಿದೆ. ಈ ವಿಷಯದಲ್ಲಿ ರಾಜ್ಯಪಾಲರ ಮಧ್ಯಸ್ಥಿಕೆ ಅಗತ್ಯವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಹಕ್ಕು, ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಬೇಕೆಂದು, ರಾಜಕೀಯ ದ್ವೇಷವನ್ನು ಬದಿಗಿಟ್ಟು ಆಡಳಿತ ನಡೆಸಲು ಸರ್ಕಾರಕ್ಕೆ ಸೂಚಿಸುವಂತೆ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಕೋಟೆ ಶಿವಣ್ಣ, ಬಿ.ಪಿ.ಮಂಜುನಾಥ್, ಪ್ರಸನ್ನ, ರಾಜಕುಮಾರ್ ಸೇರಿದಂತೆ ಇತರ ಕಾರ್ಯಕರ್ತರು ,ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Leave a Comment