ಲಂಚದ ವ್ಯವಹಾರ ಮೊದಲು ಬಂದ್ ಮಾಡಿ : ಅಧಿಕಾರಿಗಳಿಗೆ ಸಚಿವ ಖರ್ಗೆ ಖಡಕ್ ಸೂಚನೆ

ಕಲಬುರಗಿ,ಸೆ.12-ಸಬ್ ರೆಜಿಸ್ಟ್ರಾರ್, ತಹಶೀಲ್ದಾರ್, ಆರ್.ಟಿ.ಓ ಸೇರಿದಂತೆ ಎಲ್ಲ ಇಲಾಖೆಗಳಲ್ಲಿ ಲಂಚದ ವ್ಯವಹಾರ ಮೇರೆ ಮೀರುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇಂತಹ ಲಂಚದ ವ್ಯವಹಾರಗಳನ್ನು ಮೊದಲು ಬಂದ್ ಮಾಡಿ ಇಲ್ಲದಿದ್ದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಚಿತ್ತಾಪುರ, ಚಿಂಚೋಳಿ, ಸೇಡಂ, ಅಫಜಲಪುರ ಮತ್ತು ಆಳಂದ ಸಬ್ ರಜಿಸ್ಟ್ರಾರ್ ಕಚೇರಿಗಳಲ್ಲಿ ತಮಗೆ ಬೇಕಾದವರಿಗೆ ನೋಂದಣಿ ಮಾಡಿಕೊಡಲಾಗುತ್ತಿದೆ. ತಾಲ್ಲೂಕ ಅಧಿಕಾರಿಗಳ ಮೇಲೆ ಜಿಲ್ಲಾಡಳಿತ ನಿಯಂತ್ರಣ ಇಲ್ಲದಂತಾಗಿದೆ. ಅಧಿಕಾರಿಗಳು ಬೇಕಾಬಿಟ್ಟಿ ವರ್ತಿಸುತ್ತಿದ್ದಾರೆ. ಹೀಗೆ ಮುಂದುವರಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಎಚ್ಚರಿಸಿದರು.

ನೀವು ಸರ್ಕಾರಕ್ಕಾಗಿ ಕೆಲಸ ಮಾಡುತ್ತಿದ್ದಿರೋ, ಇಲ್ಲ ಕೆಲವೇ ಕೆಲವು ಜನರಿಗಾಗಿ ಕೆಲಸ ಮಾಡುತ್ತಿದ್ದಿರೋ ಎಂಬ ಅನುಮಾನ ಬರುತ್ತಿದೆ. ಅಧಿಕಾರಿಗಳ ಬೇಜವಾಬ್ದಾರಿತನ ಮೇರೆ ಮೀರುತ್ತಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.

ತಹಸೀಲ್ದಾರ ಮತ್ತು ಸಬ್ ರಜಿಸ್ಟ್ರಾರ್ ಕಚೇರಿಗಳಲ್ಲಿ ನಡೆಯುತ್ತಿರುವ ಅವ್ಯವಹಾರ, ಅಕ್ರಮಗಳ ಬಗ್ಗೆ ನಿಗಾವಹಿಸಬೇಕು, ತಪ್ಪಿತಸ್ಥರ ವಿರುದ್ಧ ಸೋಮೋಟೋ ಕೇಸು ದಾಖಲಿಸಬೇಕು ಎಂದು ಸೂಚನೆ ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಅಬಕಾರಿ ಜಿಲ್ಲಾಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಅಬಕಾರಿ ಇಲಾಖೆ ಅಧಿಕಾರಿಗಳು ಏನು ಮಾಡುತ್ತಿದ್ದಾರೋ ಗೊತ್ತಿಲ್ಲ. ಜಿಲ್ಲೆಯ ಕೆಲವು ಕಡೆ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದರು ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ. ಈ ಬಗ್ಗೆ ನಿಗಾವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಜಿಲ್ಲಾಧಿಕಾರಿಗಳ ಅನುಮತಿ ಇಲ್ಲದೆ ಯಾವುದೇ ಮದ್ಯದಂಗಡಿಯನ್ನು ಸ್ಥಳಾಂತರಿಸಕೂಡದು. ಹಾಗೊಂದು ವೇಳೆ ಸ್ಥಳಾಂತರ ಮಾಡಿದರೆ ಸೂಕ್ತ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮತ್ತು ಕಾಮಗಾರಿಗಳ ಸಂಪೂರ್ಣ ವಿವರ ಹಾಗೂ ಕಾಮಗಾರಿ ಯಾವಾಗ ಮುಗಿಸಲಾಗುತ್ತದೆ ಎಂಬುವುದರ ಬಗ್ಗೆ ಆಯಾ ತಾಲ್ಲೂಕಿನ ಶಾಸಕರಿಗೆ ಮಾಹಿತಿ ಒದಗಿಸುವಂತೆ ಸೂಚನೆ ನೀಡಿದರು.

ಲೋಕೋಪಯೋಗಿ ಇಲಾಖೆ ಕೆಲವೇ ಜನ ಗುತ್ತಿಗೆದಾರರಿಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಒಂದು ಇಲಾಖೆ ಕಪ್ಪು ಪಟ್ಟಿಗೆ ಸೇರಿಸಿದ ಗುತ್ತಿಗೆದಾರಿಗೆ ಮತ್ತೊಂದು ಇಲಾಖೆ ಗುತ್ತಿಗೆ ನೀಡುವುದು ಸರಿಯಲ್ಲ. ಕಪ್ಪು ಪಟ್ಟಿಗೆ ಸೇರಿಸಲಾದ ಗುತ್ತಿಗೆದಾರರ ಪಟ್ಟಿ ತಯಾರಿಸಿ ಮತ್ತು ಅಂತಹ ಗುತ್ತಿಗೆದಾರರ ಲೈಸೆನ್ಸ್ ರದ್ದುಪಡಿಸಿ ಎಂದು ಸೂಚಿಸಿದರು.

ಜಿ.ಪಂ.ಅಧ್ಯಕ್ಷೆ ಸುವರ್ಣಾ ಹೆಚ್.ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ ವೇದಿಕೆ ಮೇಲಿದ್ದರು.

ಶಾಸಕರಾದ ಎಂ.ವೈ.ಪಾಟೀಲ, ಡಾ.ಉಮೇಶ ಜಾಧವ, ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮೂಡ, ಕನೀಜ್ ಫಾತಿಮಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Leave a Comment