ಲೋಕ ಸಮರಕ್ಕೆ ಬಿಜೆಪಿ ಸಿದ್ಧತೆ

ನವದೆಹಲಿ, ಜ. ೧೧- ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸಲು ಕೈಗೊಳ್ಳಬೇಕಾದ ಕ್ರಮ, ಸಾಮಾಜಿಕ ನ್ಯಾಯ ಒದಗಿಸಲು ಪ್ರಧಾನಿ ಮೋದಿ ಕೈಗೊಂಡಿರುವ ಮೀಸಲಾತಿ ನೀತಿಯನ್ನು ಜನರಿಗೆ ಮನವರಿಕೆ ಮಾಡಿ ರಾಜಕೀಯ ಲಾಭ ಪಡೆಯುವ ಸಂಬಂಧ ಇಂದು ಇಲ್ಲಿ ಆರಂಭವಾದ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಲೋಕಸಭಾ ಚುನಾವಣೆಯಲ್ಲಿ ಮತ್ತೆ ನರೇಂದ್ರಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಚಾಣಕ್ಷ ರಾಜಕಾರಣಿ ಅಮಿತ್ ಶಾ ತೀವ್ರ ಕಸರತ್ತು ನಡೆಸಿದ್ದಾರೆ.
ಇಂದಿನ ಸಭೆಯಲ್ಲಿ ದಲಿತರು, ಹಿಂದುಳಿದ ವರ್ಗಗಳು ಮತ್ತು ಸಾಮಾನ್ಯ ವರ್ಗಗಳ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.

ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಈ ಎಲ್ಲ ವರ್ಗಗಳನ್ನು ಸೆಳೆದುಕೊಳ್ಳಲು ಕಾರ್ಯತಂತ್ರ ರೂಪಿಸಲು ಅಮಿತ್ ಶಾ ಮುಂದಾಗಿದ್ದಾರೆ. ೧೨ ಸಾವಿರ ಸದಸ್ಯರು ಭಾಗವಹಿಸುತ್ತಿರುವ ಈ ರಾಷ್ಟ್ರೀಯ ಮಂಡಳಿ ಸಭೆಯನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ. ಪ್ರಧಾನಿ ನರೇಂದ್ರಮೋದಿ ನಾಳೆ ಸಮಾರೋಪ ಸಮಾರಂಭದಲ್ಲಿ ಭಾಷಣ ಮಾಡಲಿದ್ದು, ಮುಂಬರುವ ಲೋಕಸಭಾ ಚುನಾವಣೆ ಪ್ರಮುಖ ಕಾರ್ಯಸೂಚಿಯಾಗಿದೆ.

ಕೇಂದ್ರ ಸರ್ಕಾರದ ಸಾಧನೆ, ಆರ್ಥಿಕಾಭಿವೃದ್ಧಿ, ಸಾಮಾಜಿಕ ನ್ಯಾಯ ಕುರಿತ ೩ ನಿರ್ಣಯಗಳನ್ನು ಅಂಗೀಕರಿಸುವ ಸಾಧ್ಯತೆ ಇದೆ. ಆದರೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪಿನ ನಂತರ ಸುಗ್ರೀವಾಜ್ಞೆ ಹೊರಡಿಸುವ ಕುರಿತು ನಿರ್ಧಾರ ಕೈಗೊಳ್ಳುವುದಾಗಿ ನರೇಂದ್ರಮೋದಿ ಹೇಳಿರುವುದು ಹಿಂದೂ ಪರ ಸಂಘಟನೆಗಳ ಅಸಮಾಧಾನಕ್ಕೂ ಕಾರಣವಾಗಿದೆ. ಈ ಅಸಮಾಧಾನ ನಿವಾರಿಸಿ ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಲಾಗುವುದು.

ಇಂದಿನ ಸಭೆಯಲ್ಲಿ ರಾಮಮಂದಿರ ನಿರ್ಮಾಣ ಕುರಿತಂತೆ ಆರೆಸ್ಸೆಸ್ ಹಾಗೂ ಹಿಂದೂ ಸಂಘಟನೆಗಳು ಬೇಡಿಕೆ ಇಟ್ಟಿರುವ ಬಗ್ಗೆಯೂ ಹಿರಿಯ ಬಿಜೆಪಿ ನಾಯಕರು ಚರ್ಚೆ ನಡೆಸುವ ಸಾಧ್ಯತೆ ಇದೆ.

ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲು ಕಾರ್ಯೋನ್ಮುಖರಾಗಿರುವ ಅಮಿತ್ ಶಾ, ಸಂಸದರು, ಚುನಾಯಿತ ಸದಸ್ಯರು, ಸ್ಥಳೀಯ ನಾಯಕರೊಂದಿಗೆ ಎರಡು ದಿನಗಳ ಕಾಲ ಚಿಂತನ-ಮಂಥನ ನಡೆಸಲಿದ್ದಾರೆ.

ಇತ್ತೀಚೆಗೆ ಸಂಸತ್ತಿನಲ್ಲಿ ಸಾಮಾನ್ಯ ವರ್ಗದವರಿಗೆ ಶೇ. ೧೦ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಅಂಗೀಕರಿಸಲಾಗಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಮತದಾರರನ್ನು ಸೆಳೆಯಲು ಕಾರ್ಯತಂತ್ರ ರೂಪಿಸಲಾಗುವುದು.

ಈ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಹಾಕಿದರೆ ಈ ಮಸೂದೆ ಜಾರಿಗೆ ಬರಲಿದೆ. ಈ ಮೂಲಕ ಹಿಂದಿ ಮಾತನಾಡುವ ರಾಜ್ಯಗಳ ಮೇಲ್ವರ್ಗದ ಮತದಾರರನ್ನು ಸೆಳೆದುಕೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಲು ಮುಂದಾಗಿದ್ದಾರೆ. ಜಾಟ್, ಪಾಟೀದಾರ್, ಮರಾಠಿಗರು ಹಾಗೂ ಇನ್ನಿತರ ಸಮುದಾಯಗಳನ್ನು ಓಲೈಸಲು ಸಾಧ್ಯವಾಗಲಿದೆ ಎಂಬ ನಂಬಿಕೆ ಬಿಜೆಪಿ ನಾಯಕರದ್ದಾಗಿದೆ.

ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಮೇಲ್ವರ್ಗದ ಸಮುದಾಯ ಪ್ರಮುಖ ಪಾತ್ರ ವಹಿಸಿತ್ತು. ಈ ಅಂಶವನ್ನು ಮನಗಂಡೇ ಮೇಲ್ವರ್ಗದ ಸಮುದಾಯಗಳಿಗೆ ಶೇ. ೧೦ರಷ್ಟು ಮೀಸಲಾತಿ ಕಲ್ಪಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಹಿಂದುಳಿದ ವರ್ಗಗಳ ಆಯೋಗಕ್ಕೆ ಸಂವಿಧಾನತ್ಮಕ ಸ್ಥಾನಮಾನ, ದಲಿತರು ಮತ್ತು ಆದಿವಾಸಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಲು ಕಾನೂನು ಬಲಪಡಿಸುವುದು ಮತ್ತು ಸಾಮಾಜಿಕ ನ್ಯಾಯ ಕಲ್ಪಿಸಿರುವುದನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರ್ಕಾರ ರೈತರು ಬೆಳೆದ ಬೆಳೆಗಳಿಗೆ ದುಪ್ಪಟ್ಟು ದರ ಹಾಗೂ ಬಡವರಿಗೆ ವಿವಿಧ ಕಲ್ಯಾಣ ಯೋಜನೆಗಳು ಮತ್ತು ಅವರ ಆರ್ಥಿಕ ಪರಿಸ್ಥಿತಿಯ ಬೆಳವಣಿಗೆ ಕುರಿತು ಇಂದಿನ ಸಭೆಯಲ್ಲಿ ವಿಸ್ತೃತ ಸಮಾಲೋಚನೆ ನಡೆಯಲಿದೆ.

ಕಳೆದ ಬಾರಿಯ ಲೋಕಸಭಾ ಚುನಾವಣೆಗಿಂತ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ನಿಟ್ಟಿನಲ್ಲಿ ಎಲ್ಲ ನಾಯಕರು ಶ್ರಮವಹಿಸಬೇಕು. ೫೪೩ ಸದಸ್ಯ ಬಲದ ಲೋಕಸಭೆಯಲ್ಲಿ ಬಿಜೆಪಿ ೨೮೨ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಪಕ್ಷ ಅಧಿಕಾರಕ್ಕೆ ಬಂದಿತು.

ಆದರೆ, ಉತ್ತರ ಪ್ರದೇಶ ರಾಜ್ಯ ಲೋಕಸಭಾ ಚುನಾವಣೆಗೆ ನಿರ್ಣಾಯಕ ಪಾತ್ರ ವಹಿಸಲಿದೆ. ಈ ಬಾರಿ ಬಿಜೆಪಿಯನ್ನು ಪರಾಭವಗೊಳಿಸಲು ಸಮಾಜವಾದಿ ಹಾಗೂ ಬಹುಜನ ಸಮಾಜವಾದಿ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ಇದು ಬಿಜೆಪಿಗೆ ಸವಾಲಾಗಿ ಪರಿಣಮಿಸಿದೆ. ಅಲ್ಲದೆ, ಪಂಚರಾಜ್ಯಗಳ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ರಾಜ್ಯಗಳಲ್ಲಿ ರೈತರ ಸಾಲಮನ್ನಾ ಮಾಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಹಲವು ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಂಡು ಬಿಜೆಪಿ ವಿರುದ್ಧ ಸಮರ ಸಾರಲು ಮುಂದಾಗಿವೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್‌ಗೆ ತಿರುಗೇಟು ನೀಡುವ ಸಂಬಂಧ ಬಿಜೆಪಿ ನಾಯಕರು ರಣನೀತಿ ರೂಪಿಸಲಿದ್ದಾರೆ.

Leave a Comment