ವರ್ತಕರ ಬೇಡಿಕೆ ಈಡೇರಿಕೆ ಸಚಿವ ಎಸ್‌ಟಿಎಸ್ ಭರವಸೆ

ಬೆಂಗಳೂರು, ಏ. ೬- ಮುಖ್ಯಮಂತ್ರಿ ಯಡಿಯೂರಪ್ಪನವರ ಜತೆ ಚರ್ಚಿಸಿ ವರ್ತಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಹಕಾರ ಮತ್ತು ಎಪಿಎಂಸಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ನಗರದ ನೆಲಮಂಗಲ ಬಳಿಯಿರುವ ದಾಸನಪುರದ ಎಪಿಎಂಸಿ ಮಾರುಕಟ್ಟೆಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ತಕರು ತಮ್ಮ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಅವರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.
ವರ್ತಕರ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಸಿದ್ಧವಿದೆ. ಈ ಲಾಕ್‌ಡೌನ್ ಮುಗಿದ ನಂತರ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಕೊರೊನಾ ಸೋಂಕು ಹರಡುವುದನ್ನು ತಡೆಯಲು ಎಪಿಎಂಸಿ ಮಾರುಕಟ್ಟೆಯನ್ನು ತಾತ್ಕಾಲಿಕವಾಗಿ ದಾಸನಪುರಕ್ಕೆ ಸ್ಥಳಾಂತರಿಸಲಾಗಿದೆ. ಈ ತಿಂಗಳ 31 ರವರೆಗೂ ಇಲ್ಲಿ ವ್ಯಾಪಾರ ವಹಿವಾಟುಗಳು ನಡೆಯಲಿವೆ. 31 ರ ನಂತರ ಎಪಿಎಂಸಿಯಲ್ಲೇ ವ್ಯಾಪಾರ ವಹಿವಾಟು ನಡೆಸುವ ಸಂಬಂಧ ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದರು.
ಇಂದು ದಾಸನಪರು ಎಪಿಎಂಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಯಶವಂತಪುರ ಎಪಿಎಂಸಿಯಲ್ಲಿ ಸುಮಾರು40-50 ವರ್ಷಗಳಿಂದ ವ್ಯಾಪಾರ ಮಾಡುತ್ತಿರುವವರಿಗೆ ಅಂಗಡಿ ನೀಡಿಲ್ಲ ಎಂಬ ದೂರುಗಳು ವರ್ತಕರಿಂದ ಬಂದಿವೆ. ಎಲ್ಲರಿಗೂ ಅಂಗಡಿ ಮಳಿಗೆಗಳನ್ನು ನೀಡುವಂತೆ ಸೂಚನೆ ನೀಡಿದ್ದೇನೆ. ಅನಗತ್ಯವಾಗಿ ಗೊಂದಲ ಸೃಷ್ಟಿಸಿದರೆ ಲೆಸೈನ್ಸ್ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದರು.
ವರ್ತಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿ ಪರಿಹಾರ ದೊರಕಿಸಲು ಭರವಸೆ ನೀಡಿದ ಹಿನ್ನೆಲೆಯಲ್ಲಿ ವರ್ತಕರು ಮುಷ್ಕರವನ್ನು ವಾಪಸ್ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಸಂಬಂಧ ವರ್ತಕರ ಸಂಘದ ಅಧ್ಯಕ್ಷ ಶಂಕರಪ್ಪ ಜತೆಯೂ ಚರ್ಚಿಸಲಾಗಿದೆ. ವರ್ತಕರ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್ ದಾಸನಪುರ ಎಪಿಎಂಸಿಯ ವ್ಯಾಪಾರ ವಹಿವಾಟು, ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು.

Leave a Comment