ವಸತಿ ಯೋಜನೆಗೆ ಜಮೀನು ಗುರುತಿಸಲು ಸಿಎಂ ಸೂಚನೆ

ಬೆಂಗಳೂರು, ಜೂ. ೧೩- ಮುಖ್ಯಮಂತ್ರಿಗಳ ಬಹುಮಹಡಿ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಕೂಡಲೇ ಜಮೀನು ಗುರುತಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜಿಲ್ಲಾಧಿಕಾರಿಗಳಿಗೆ ಇಂದು ಕಟ್ಟಪ್ಪಣೆ ಮಾಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿನ್ನೆಯಿಂದ ನಡೆಯುತ್ತಿರುವ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದ ಕೊನೆಯ ದಿನವಾದ ಇಂದು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ದೇವರಾಜು ಅರಸು ವಸತಿ ಯೋಜನೆಯಡಿ ದಮನಿತರು, ಶೋಷಿತ ವರ್ಗದವರಿಗೆ ವಸತಿ ಸೌಲಭ್ಯ ಮಂಜೂರು ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿನ ಸಮಿತಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಸೂಚಿಸಿದರು.
ನಿಗದಿಪಡಿಸಲಾಗಿರುವ 63,196 ಗುರಿ ಈಡೇರಿಸುವ ನಿಟ್ಟಿನಲ್ಲಿ ಕೇವಲ 32,075 ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಶೀಘ್ರವೇ ಜಿಲ್ಲಾಧಿಕಾರಿಗಳು ಆಸಕ್ತಿ ವಹಿಸಿ ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಫಲಾನುಭವಿಗಳನ್ನು ಗುರುತಿಸಿ ಮನೆ ಹಂಚಿಕೆ ಮಾಡುವಂತೆಯೂ ಸೂಚನೆ ನೀಡಿದರು.
ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಲು ತುರ್ತಾಗಿ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಹುದ್ದೆಗಳನ್ನು ಭರ್ತಿ ಮಾಡಲು ನಿವೃತ್ತ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೂ ಅನುದಾನ ಮೀಸಲಿಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು.
ಎಲ್ಲ ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನೆಯನ್ನು ಪ್ರತಿ ಮೂರು ತಿಂಗಳಿಗೊಮ್ಮೆ ತಪ್ಪದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಅವರು ತಾಕೀತು ಮಾಡಿದರು.
ಮುಖ್ಯಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಮಂಜೂರಾದ 4080 ಕಾಮಗಾರಿಗಳಲ್ಲಿ ಕೇವಲ 765 ಪೂರ್ಣಗೊಂಡಿವೆ. 1939 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವುಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ವಿವಿಧ ಜಿಲ್ಲೆಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಅನುದಾನದ ಪೈಕಿ ಶೇ. 75 ರಷ್ಟನ್ನು ಬಿಡುಗಡೆ ಮಾಡಲಾಗುವುದು. ಕೂಡಲೇ ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಅವರು ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಉನ್ನತಾಧಿಕಾರಿಗಳು, ಕಾರ್ಯದರ್ಶಿ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment