ವಿಪತ್ತು ನಿರ್ವಹಣಾ ನೀತಿ ಶೀಘ್ರ ಅಂತಿಮಗೊಳಿಸಿ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ನ 20 – ರಾಷ್ಟ್ರೀಯ ವಿಪತ್ತು ನಿರ್ವಹಣಾ ನೀತಿ ಮಾದರಿಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ನೀತಿ ಕರಡು ಸಿದ್ಧವಿದ್ದು, 8 ವಾರದೊಳಗೆ ಇದನ್ನು ಅಂತಿಮ ಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಯೋಜನೆಯನ್ನು 8 ವಾರದೊಳಗೆ ಅಂತಿಮ ಗೊಳಿಸಬೇಕು. ಪ್ರತಿ ಇಲಾಖೆಯಲ್ಲಿ ವಿಪತ್ತು ನಿರ್ವಹಣಾ ಯೋಜನೆ ರೂಪಿಸಬೇಕು.ವಿಪತ್ತು ನಿರ್ವಹಣೆ ಗೆ ಎಸ್ ಡಿ ಆರ್ ಎಫ್ ಗೆ 14 ನೇ ಹಣಕಾಸು ಆಯೋಗದಡಿ 1527 ಕೋಟಿ ರೂಪಾಯಿ ಅನುದಾನ ನಿಗದಿ ಪಡಿಸಲಾಗಿದೆ. ಇದರಲ್ಲಿ ಕೇಂದ್ರದ ಪಾಲು ಶೇ. 75 ರಷ್ಟು ಇದ್ದು, ರಾಜ್ಯದ ಪಾಲು ಶೇಕಡಾ 25 ರಷ್ಟಿದೆ. ಆದರೆ ರಾಜ್ಯ ಸರ್ಕಾರ ತುರ್ತು ಸಂದರ್ಭಗಳಲ್ಲಿ ಇನ್ನೂ ಹೆಚ್ಚಿನ ಮೊತ್ತ ಬಿಡುಗಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದರು.

ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮಾತನಾಡಿ, ರಾಜ್ಯದ ಎಲ್ಲ ವಿಭಾಗಗಳಲ್ಲಿ ತಲಾ 50 ಜನರ ಎಸ್ ಡಿ ಆರ್ ಎಫ್ ರಕ್ಷಣಾ ತಂಡಗಳ ನಿಯೋಜನೆಗೆ ಕ್ರಮ ವಹಿಸಲಾಗಿದ್ದು, ಎಸ್ ಡಿಆರ್ ಎಫ್ ಅಡಿ ರಕ್ಷಣಾ ಉಪಕರಣಗಳ ಖರೀದಿಗೆ 20 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ವಿವರಿಸಿದರು.
ಇತ್ತೀಚೆಗೆ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದ ಸಂತ್ರಸ್ತರಿಗೆ ಪರಿಹಾರ ವಿತರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅರ್ಹ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ನಿಬಂಧನೆಗಳನ್ನು ಸರಳೀಕರಣಗೊಳಿಸುವಂತೆ ಇದೇ ವೇಳೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಮನೆ ಕಳೆದುಕೊಂಡವರಿಗೆ ಮೊದಲ ಕಂತಿನ 1 ಲಕ್ಷ ರೂಪಾಯಿ ಪರಿಹಾರ ವಿತರಣೆ ಮಾಡಿದ ಕುರಿತು ಫಲಾನುಭವಿಗಳಿಗೆ ಪತ್ರ ಬರೆದು ಮಾಹಿತಿ ನೀಡಿ, ಮನೆ ನಿರ್ಮಿಸುವಂತೆ ಜನರಿಗೆ ತಿಳಿಸುವಂತೆ ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚಿಸಿದ್ದಾರೆ ಎಂದರು.  ಸಭೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ.ಸೋಮಣ್ಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಪಶು ಸಂಗೋಪನಾ ಸಚಿವ ಪ್ರಭು ಚವಾಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.

2 Comments on this Post

  1. I couldn?t refrain from commenting. Very well written!

    Reply

Leave a Comment