ಸಂಪೂರ್ಣ ಮದ್ಯಪಾನ ನಿಷೇಧಕ್ಕೆ ಆಗ್ರಹ

(ನಮ್ಮ ಪ್ರತಿನಿಧಿಯಿಂದ)
ಬೆಂಗಳೂರು, ಜೂ. ೧೯ – ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧ ಮಾಡಿ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಸಂಯುಕ್ತ ಜನತಾದಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕುಮಾರಪಾರ್ಕ್‌ನ ಪಕ್ಷದ ಕಚೇರಿಯಿಂದ ಬೆಳಿಗ್ಗೆ ಪಾನ ನಿಷೇಧ ಹಾಗೂ ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಆನಂದ್‌ರಾವ್ ವೃತ್ತದ ಗಾಂಧಿ ಪ್ರತಿಮೆವರೆಗೆ ಪಾದಯಾತ್ರೆ ನಡೆಸಿ ಸಮಾವೇಶಗೊಂಡ ಕಾರ್ಯಕರ್ತರು ಮಧ್ಯಾಹ್ನ 3ರ ವರೆಗೆ ಧರಣಿ ನಡೆಸಿದರು.

ಬಿಹಾರದಲ್ಲಿ ಜಾರಿಗೊಳಿಸಿರುವಂತೆ ರಾಜ್ಯದಲ್ಲೂ ಸಂಪೂರ್ಣ ಮದ್ಯಪಾನ ನಿಷೇಧ ಮಾಡಿ, ಕುಡಿತದಿಂದ ಆಗುತ್ತಿರುವ ಅನಾಹುತವನ್ನು ತಪ್ಪಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೇ ವೇಳೆ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಎಲ್ಲಾ ಬಗೆಯ ಸಾಲ ಮನ್ನಾ ಮಾಡಿ ರೈತರ ಆತ್ಮಹತ್ಯೆಯನ್ನು ತಡೆಗಟ್ಟಲು ರೈತ ಪರ ಯೋಜನೆಗಳು, ಕಾರ್ಯಕ್ರಮಗಳನ್ನು ರೂಪಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಧರಣಿಯ ನೇತೃತ್ವವನ್ನು ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಉಮೇಶ್ ವಹಿಸಿದ್ದರು.

Leave a Comment