ಸಚಿವ ಶೆಟ್ಟಿ ಆಪ್ತನ ಬಳಿ ಹಣ, ಕಾನೂನು ರೀತಿ ಕ್ರಮ: ಸಿಎಂ

ಬೆಂಗಳೂರು, ಜ. ೧೧- ಸಚಿವ ಪುಟ್ಟರಂಗಶೆಟ್ಟಿ ಅವರ ಆಪ್ತನ ಬಳಿ ಹಣ ಪತ್ತೆಯಾದ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಕಾನೂನಿನಂತೆ ಕ್ರಮ ಕೈಗೊಳ್ಳಲು ಸ್ವಲ್ಪ ಸಮಯಾವಕಾಶ ಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ದೇಶದ ದಿ. ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 53ನೇ ಪುಣ್ಯತಿಥಿಯ ದಿನವಾದ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಶಾಸ್ತ್ರಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಹಣ ಪತ್ತೆ ಪ್ರಕರಣ ನನ್ನ ಗಮನದಲ್ಲಿದೆ. ಕಾನೂನಿನಂತೆ ಕ್ರಮ ಕೈಗೊಳ್ಳಬೇಕು. ಅದಕ್ಕೆ ಸಮಯಾವಕಾಶ ಬೇಕಾಗುತ್ತದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಈ ಪ್ರಕರಣದ ಬಗ್ಗೆ ತನಿಖೆ ನಡೆದಿದೆ. ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಕಾನೂನಿನ ಪ್ರಕಾರ ತೀರ್ಮಾನ ಕೈಗೊಳ್ಳುವುದಾಗಿಯೂ ಅವರು ಹೇಳಿದರು.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ವರದಿ ಪ್ರಕಟಿಸದಂತೆ ಸಚಿವ ಪುಟ್ಟರಂಗಶೆಟ್ಟಿ ನ್ಯಾಯಾಲಯದ ಮೊರೆ ಹೋಗಿರುವುದು ಅವರ ವೈಯುಕ್ತಿಕ ತೀರ್ಮಾನ. ಇದರಿಂದ ಮಾಧ್ಯಮಗಳ ಸ್ವಾತಂತ್ರ್ಯ ಹರಣವಾಗುತ್ತಿದೆ ಎಂದು ಹೇಳುತ್ತಿದ್ದೀರಿ. ಆದರೆ ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ನಿಗಮ ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕೆಲವು ತಾಂತ್ರಿಕ ತೊಂದರೆಗಳಾಗಿವೆ. ಈ ಬಗ್ಗೆ ನಾನು ಬೀದಿಯಲ್ಲಿ ನಿಂತು ಮಾತನಾಡಲು ಸಾಧ್ಯವಿಲ್ಲ. ಹಾಗೆ ಮಾತನಾಡಿ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಕುಗ್ಗಿಸಲು ಇಚ್ಛಿಸುವುದಿಲ್ಲ. ಅದು ನನಗೆ ಶೋಭೆ ತರುವುದಿಲ್ಲ. ಹಾಗಾಗಿ ಈ ಬಗ್ಗೆ ಎಲ್ಲರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಮಾಡುತ್ತೇನೆ ಎಂದು ಅವರು ಹೇಳಿದರು.

ಮಂಗನ ಕಾಯಿಲೆ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ. ಕಾಯಿಲೆ ಹರಡದಂತೆ ಸೂಕ್ತ ಕ್ರಮ ಕೈಗೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಕಾಯಿಲೆಗೆ ತುತ್ತಾಗಿರುವವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ಈಗಾಗಲೇ ಆರೋಗ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಮಂಗನಕಾಯಿಲೆ ನಿಯಂತ್ರಣಕ್ಕೆ ಎಲ್ಲ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ ಎಂದು ಅವರು ಹೇಳಿದರು.

 ತೀರ್ಮಾನ ಆಗಿಲ್ಲ
ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯಬೇಕು ಎಂಬ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ಅಭಿಮಾನಿಗಳು ಒತ್ತಡ ಹೇರುತ್ತಿರುವುದು ನಿಜ. ಆದರೆ ಈ ಬಗ್ಗೆ ಪಕ್ಷದ ವರಿಷ್ಠರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

 ನೆನಪು
ದಿ. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ತಮ್ಮ ನಡವಳಿಕೆಯಿಂದ ರಾಜಕಾರಣಿಗಳು ಹೇಗಿರಬೇಕು ಎಂಬುದನ್ನು ತೋರಿಸಿದ್ದಾರೆ. ದೇಶ ಕಾಯುವ ಸೈನಿಕ ಹಾಗೂ ಅನ್ನ ನೀಡುವ ಅನ್ನದಾತನ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು, ‘ಜೈ ಜವಾನ್, ಜೈ ಕಿಸಾನ್’ ಅವರ ಈ ಮಂತ್ರ ನಮ್ಮೆಲ್ಲರ ಸ್ಮೃತಿ ಕಟಲದಲ್ಲಿ ಅಚ್ಚಳಿಯದೆ ಉಳಿದಿದೆ. ದೇಶ ಕಂಡ ಮಹಾನ್ ನಾಯಕ ಶಾಸ್ತ್ರಿ ಎಂದು ಗುಣಗಾನ ಮಾಡಿದರು.

Leave a Comment