ಸದಾಶಿವ ಆಯೋಗ ವರದಿ ಜಾರಿಗೆ ಸ್ವಾಮೀಜಿ ಆಗ್ರಹ

ಬೆಂಗಳೂರು, ಡಿ.೧೧- ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಟಾನ ಸೇರಿದಂತೆ, ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮುಂದಾಗಲಿ ಎಂದು ಬೃಹನ್ಮಠ ಆದಿಜಾಂಬವ ಪೀಠಾಧಿಪತಿ ಜಾಂಬವಶ್ರೀ ಬ್ರಹ್ಮಾನಂದಮುನಿ ಸ್ವಾಮೀಜಿ ಹೇಳಿದರು.

ನಗರದ ವಸಂತನಗರದ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಕರ್ನಾಟಕ ಆದಿಜಾಂಬವ(ಮಾದಿಗ) ಸಂಘಟನೆ ಒಕ್ಕೂಟ ಆಯೋಜಿಸಿದ್ದ, ಮಾದಿಗ ಸಮುದಾಯ, ಮುಖಂಡರ ಬೃಹತ್ ಸಮಾವೇಶ ಉದ್ಘಾಟಿಸಿ ಇಂದು ಮಾತನಾಡಿದರು.
ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಜನರು ಸಾಕಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸಮಾಜದ ಕಟ್ಟಕಡೆಯ ವರ್ಗದವರಿಗೂ ಹೆಚ್ಚು ರಕ್ಷಣೆ ನೀಡುವ ನಿಟ್ಟಿನಲ್ಲಿ ಆದಿಜಾಂಬವ ಅಧಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.
ಮಾದಿಗ ಸಮುದಾಯ ತುಂಬಾ ಹಿಂದುಳಿದಿದೆ. ಪರಿಶಿಷ್ಟ ಜಾತಿ ಸಮುದಾಯಗಳ ಪೈಕಿ ಮಾದಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಅವರು ಆರ್ಥಿಕ, ರಾಜಕೀಯ, ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅಂಬೇಡ್ಕರ್ ಅವರು ಇಂತಹ ಸಮುದಾಯಗಳಿಗೆ ಒಳ ಮೀಸಲಾತಿ ನೀಡುವ ಮೂಲಕ ಮುಖ್ಯವಾಹಿನಿಗೆ ತರಬೇಕು ಎಂದು ಪ್ರತಿಪಾದಿಸಿದ್ದರು. ಅದು ಇಂದಿಗೂ ನನಸಾಗಿಲ್ಲ ಎಂದು ಹೇಳಿದರು.
ಒಕ್ಕೂಟದ ಅಧ್ಯಕ್ಷ ಜಂಬೂದ್ವೀಪ ಸಿದ್ದರಾಜು ಮಾತನಾಡಿ, ಆದಿಜಾಂಬವ ಸಮುದಾಯ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿ ಗುರುತಿಸಲ್ಪಟ್ಟಿದ್ದರೂ ಸಂವಿಧಾನಿಕವಾಗಿ ಯಾವುದೇ ಸೌಲಭ್ಯವೂ ಸಿಗುತ್ತಿಲ್ಲ. ಹೀಗೆ ಅವಕಾಶ ವಂಚಿತರಾಗಿ ಬದುಕುತ್ತಿರುವವರಿಗೆ ತಾರತಮ್ಯವಿಲ್ಲದೆ ಮೀಸಲಾತಿ ಸೌಲಭ್ಯ ಸಿಗಬೇಕಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ, ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡುವ ಜತೆಗೆ ಸದಾಶಿವ ಆಯೋಗದ ವರದಿ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.
ಒಳ ಮೀಸಲಾತಿ ಕುರಿತಂತೆ ನ್ಯಾ.ಎ.ಜೆ.ಸದಾಶಿವ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿ ಹಲವು ವರ್ಷಗಳು ಕಳೆದರೂ ಈವರೆಗೆ ಸರ್ಕಾರ ಆ ವರದಿಯನ್ನು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿಲ್ಲ. ಕೂಡಲೇ ಸರ್ಕಾರ ಈ ಕುರಿತು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಧರ್ಮಸೇನಾ, ಒಕ್ಕೂಟದ ಮುಖಂಡರು, ಸಮುದಾಯದ ನಾಯಕರು, ಸ್ವಾಮೀಜಿಗಳು ಪಾಲ್ಗೊಂಡಿದ್ದರು.

Leave a Comment