ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ, ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು,ಅ.18: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ನಿರೀಕ್ಷೆಯಂತೆ ದೀಪಾವಳಿ ಹಬ್ಬಕ್ಕೂ ಮುನ್ನ ಉಡುಗೊರೆಯನ್ನು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಘೋಷಿಸಿದೆ. ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ(ಡಿಎ) ಹೆಚ್ಚಳ ಮಾಡಿ ಶುಕ್ರವಾರದಂದು ಅಧಿಕೃತ ಆದೇಶ ಹೊರಡಿಸಲಾಗಿದೆ.

ಸರ್ಕಾರಿ ನೌಕರರಿಗೆ ಶೇ.4.75 ತುಟ್ಟಿಭತ್ಯೆ ನೀಡಲು ತೀರ್ಮಾನಿಸಲಾಗಿದೆ. ಅಖಿಲ ಭಾರತ ಬೆಲೆ ಸೂಚ್ಯಂಕ(price index) ಆಧರಿಸಿ ಕೇಂದ್ರ ಸರ್ಕಾರ ನೌಕರರಿಗೆ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರವು ಶೇ.5 ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಸರ್ಕಾರಿ ನೌಕರರಿಗೆ ಶುಭ ಸುದ್ದಿ ಕೊಟ್ಟ ಸರ್ಕಾರ, ತುಟ್ಟಿಭತ್ಯೆ ಲೆಕ್ಕಾಚಾರ ಹೇಗೆ? ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ತಂಡ ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ತುಟ್ಟಿಭತ್ಯೆ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿದ್ದ ಮನವಿ ಪತ್ರ ಸಲ್ಲಿಸಿದ್ದರು. 4.75% ರಂತೆ ಡಿಎ ಹೆಚ್ಚಳವಾಗಲಿದೆ.

ತುಟ್ಟಿಭತ್ಯೆ ಹೆಚ್ಚಳದ ಲಾಭ ಯಾರಿಗೆ ರಾಜ್ಯ ಸರ್ಕಾರಿ ನೌಕರರು, ಜಿಲ್ಲಾ ಪಂಚಾಯತ್ ಗಳ ಪೂರ್ಣಾವಧಿ ನೌಕರರು, ಕಾಲಿಕ ವೇತನ ಶ್ರೇಣಿಗಳಲ್ಲಿ ಪೂರ್ಣಾವಧಿ ವರ್ಕ್ ಚಾರ್ಜ್ ನೌಕರರು, ಸರ್ಕಾರದ ಸಹಾಯಾನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ, ವಿಶ್ವವಿದ್ಯಾಲಯಗಳ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೂ ತುಟ್ಟಿಭತ್ಯೆ ಹೆಚ್ಚಳದ ಲಾಭ ದೊರೆಯಲಿದೆ. ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯ ಸರ್ಕಾರಿ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುವವರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಹೆಚ್ಚಳ ಅನ್ವಯವಾಗಲಿದೆ.

Leave a Comment