ಸರ್ಕಾರ ಆಪರೇಷನ್ ಕಮಲದ ಕೂಸು ಸಿದ್ದು ಟೀಕೆ

ಬೆಂಗಳೂರು, ಫೆ. ೨೦- ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳುಗಳಾದರೂ ಯಾವುದೇ ಹೊಸ ಕಾರ್ಯಕ್ರಮವನ್ನು ಈವರೆಗೆ ಪ್ರಕಟಿಸಿಲ್ಲ. ರಾಜ್ಯಪಾಲರ ಭಾಷಣದ ಮೂಲಕ ಸರ್ಕಾರದ ಮುನ್ನೋಟವನ್ನು ಜನತೆ ಮುಂದಿಡಲಾಗಿದೆ. ಆದರೆ, ಇದರಲ್ಲಿ ಯಾವುದೇ ಮುನ್ನೋಟ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ವಿಧಾನಸಭೆಯಲ್ಲಿಂದು ಆರೋಪಿಸಿದರು.
ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯ ಕುರಿತು ಮುಂದುವರೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಹಿಂದಿನ ಸರ್ಕಾರಗಳ ಸಾಧನೆ ಹಾಗೂ ಕಾರ್ಯಕ್ರಮಗಳನ್ನು ಹೇಳಲಾಗಿದೆ. ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕ 2 ಕಂತುಗಳಲ್ಲಿ 4 ಸಾವಿರ ರೂ. ಆರ್ಥಿಕ ನೆರವು ನೀಡುವುದಾಗಿ ಘೋಷಣೆ ಮಾಡಿರುವುದನ್ನು ಹೊರತುಪಡಿಸಿದರೆ ಹೇಳಿಕೊಳ್ಳುವಂತಹ ಯಾವುದೇ ಕಾರ್ಯಕ್ರಮಗಳನ್ನು ರೂಪಿಸಿಲ್ಲ ಎಂದರು.
ಅರಣ್ಯ ಬೆಳವಣಿಗೆಯಲ್ಲಿ ಕರ್ನಾಟಕ ನಂ.1 ಎಂದು ಮುಖ್ಯಮಂತ್ರಿ ಹಾಗೂ ಸಚಿವರು ಹೇಳಿಕೊಳ್ಳುತ್ತಿರುವುದು ಸರಿಯಲ್ಲ. ಸರ್ಕಾರ ಬಂದ 6 ತಿಂಗಳಲ್ಲೇ ಅರಣ್ಯ ಬೆಳೆಸಲು ಸಾಧ್ಯವೆ. ಅದು ಕೂಡಾ ನಮ್ಮ ಸರ್ಕಾರದ ಸಾಧನೆ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜುಲೈ 26 ರಂದು ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿದ್ದು, ಈ ಸರ್ಕಾರ ರಚನೆಯಾಗಿರುವುದು ಆಪರೇಷನ್ ಕಮಲದ ಮೂಲಕವೇ ಹೊರತು ಜನಾದೇಶದಿಂದ ಅಲ್ಲ. ಆಪರೇಷನ್ ಕಮಲದ ಮೂಲಕ ಅನೈತಿಕವಾಗಿ ಹುಟ್ಟಿದ ಕೂಸು ಈ ಸರ್ಕಾರವಾಗಿದೆ ಎಂದು ಟೀಕಿಸಿದರು.
ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಡೆದಂತಹ ಕ್ಷಿಪ್ರ ರಾಜಕೀಯ ಬೆಳವಣಿಗೆಗಳನ್ನು ಸವಿಸ್ತಾರವಾಗಿ ಹೇಳಿದ ಅವರು, ಜನಾರ್ಶೀವಾದದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಬಿಜೆಪಿ ನಾಯಕರು ಹೇಳುವುದರಲ್ಲಿ ಅರ್ಥವಿಲ್ಲ ಎಂದರು.
ಹಿಂದೆಂದೂ ಕಾಣದಂತಹ ಪ್ರವಾಹ ಪರಿಸ್ಥಿತಿ ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾಗಿತ್ತು. ಆದರೆ, ಈ ಪ್ರವಾಹದಿಂದ ಮನೆ, ಮಠ ಕಳೆದುಕೊಂಡ ಸಂತ್ರಸ್ತರ ನೆರವಿಗೆ ಹಾಗೂ ಅವರಿಗೆ ಬದುಕನ್ನು ಕಟ್ಟಿಕೊಡುವಲ್ಲಿ ಸರ್ಕಾರ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ ಎಂದು ಆರೋಪಿಸಿದರು.
ಪ್ರವಾಹದಿಂದ ಕೊಚ್ಚಿ ಹೋದ ಶಾಲಾ ಕಟ್ಟಡಗಳು, ಅಂಗಡಿ ಮುಂಗಟ್ಟುಗಳಿಗೆ ಸೂಕ್ತ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಶಾಲೆಗಳು ಬಿದ್ದು ಹೋಗಿರುವುದರಿಂದ ಮಕ್ಕಳು ದೇವಸ್ಥಾನ, ಅಂಗನವಾಡಿ, ಮರದ ಕೆಳಗಡೆ ಕಲಿಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.

Leave a Comment