ಸರ್ಕಾರ ಪತನಕ್ಕೆ ಬಿಜೆಪಿ ಯತ್ನ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಬೆಂಗಳೂರು, ಜು. ೧೦- ಸಂವಿಧಾನಬದ್ಧವಾಗಿ ರಚನೆಯಾಗಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಆಪರೇಷನ್ ಕಮಲದ ಮೂಲಕ ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ನ ಘಟಾನುಘಟಿ ನಾಯಕರು ಬೀದಿಗಿಳಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್‌ನ ಹಿರಿಯ ನಾಯಕರಾದ ಗುಲಾಂನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಹಿರಿಯ ನಾಯಕರು ನಗರದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರವರು ಸಾತ್ ನೀಡುವ ಮೂಲಕ ಬಿಜೆಪಿ ನಾಯಕರು ಮತ್ತು ರಾಜ್ಯಪಾಲರ ನಡೆಯನ್ನು ತೀವ್ರವಾಗಿ ವಿರೋಧಿಸಿದರು.
ಈ ವೇಳೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವ ಹುನ್ನಾರಕ್ಕೆ ಬಿಜೆಪಿ ನಾಯಕರು ಕೈ ಹಾಕಿದ್ದಾರೆ.
ದೇಶದ ವಿವಿಧ ರಾಜ್ಯಗಳಲ್ಲಿ ಆಡಳಿತಾರೂಢ ಸರ್ಕಾರವನ್ನು ಕೆಡವಿ, ಸರ್ಕಾರ ರಚಿಸದಂತೆ ಇಲ್ಲಿಯೂ ಮಾಡಲು ಹೊರಟಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಶಾಸಕರ ರಾಜೀನಾಮೆ ಹಿಂದೆ.ನಮ್ಮದ್ದೇನೂ ಕೈವಾಡವಿಲ್ಲ ಎಂದು ಹೇಳುವ ಬಿಜೆಪಿ ನಾಯಕರು, ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಬೆಂಗಾವಲಾಗಿ ನಿಂತಿದ್ದಾರೆ. ಅವರನ್ನು ಮುಂಬೈಗೆ ಕರೆದುಕೊಂಡು ಹೋಗಲು ಅವರಿಗೆ ಹೋಟೆಲ್, ವಿಮಾನ ಸೇರಿದಂತೆ ಎಲ್ಲವನ್ನೂ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿರಿಯ ನಾಯಕರುಗಳಾದ ಗುಲಾಂನಬಿ ಆಜಾದ್, ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಬಿಜೆಪಿ ನಾಯಕರ ನಡೆಯನ್ನು ತೀವ್ರವಾಗಿ ಖಂಡಿಸಿ ಆಕ್ರೋಶ ಹೊರ ಹಾಕಿದರು.

Leave a Comment