ಸರ್ಕಾರ ಸುಭದ್ರ : ರೇಣುಕಾ

ತುಮಕೂರು, ಸೆ. ೧೨- ಯಾವುದೇ ಕಾರಣಕ್ಕೂ ಬಿಜೆಪಿ ಸರ್ಕಾರ ಪತನವಾಗುವುದಿಲ್ಲ. ಮಧ್ಯಂತರ ಚುನಾವಣೆಯೂ ಎದುರಾಗುವುದಿಲ್ಲ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದರು.
ಬಿಜೆಪಿ ಸರ್ಕಾರ ಬೀಳುತ್ತದೆ ಎಂದು ಹಗಲು ಕನಸು ಕಾಣುತ್ತಿರುವ ಸಿದ್ದರಾಮಯ್ಯನವರು ಮೊದಲು ತಮ್ಮ ಪಕ್ಷದಲ್ಲಿರುವ ಒಳ ಜಗಳವನ್ನು ಸರಿಪಡಿಸಿಕೊಳ್ಳಲಿ, ನಂತರ ಇನ್ನೊಂದು ಪಕ್ಷದ ಬಗ್ಗೆ ಮಾತನಾಡಲಿ ಎಂದು ಟಾಂಗ್ ನೀಡಿದರು.
2023ಕ್ಕೆ ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದು ಅವರು ಭವಿಷ್ಯ ನುಡಿದರು.
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಇಡಿ ಅಧಿಕಾರಿಗಳು ತನ್ನ ಕೆಲಸ ಮಾಡುತ್ತಿದ್ದಾರೆ ಎಂದರು.
ಡಿ.ಕೆ. ಶಿವಕುಮಾರ್ ಬಂಧನದ ಹಿನ್ನೆಲೆಯಲ್ಲಿ ಬಂದ್ ಮಾಡುವುದು, ಸಾರ್ವಜನಿಕರ ಆಸ್ತಿಪಾಸ್ತಿ ಹಾನಿ ಮಾಡುವುದು ಸರಿಯಲ್ಲ. ಕಾನೂನು ರೀತಿಯಲ್ಲಿ ಹೋರಾಟ ನಡೆಸಬೇಕೇ ವಿನಃ ಪ್ರತಿಭಟನೆಯಿಂದ ಅಲ್ಲ ಎಂದು ಅವರು ಹೇಳಿದರು.
ಕಾಂಗ್ರೆಸ್‌ನಲ್ಲಿ ಪ್ರಭಾನವಿ ವ್ಯಕ್ತಿಯಾಗಿರುವ ಡಿ.ಕೆ. ಶಿವಕುಮಾರ್ ಅವರು ಮತ್ತೆ ವಾಪಸ್ಸು ಬಂದರೆ ರಾಜಕೀಯವಾಗಿ ಬೆಳೆಯುತ್ತಾರೆಂಬ ಕಾರಣದಿಂದ ಕಾಂಗ್ರೆಸ್‌ನವರೇ ಅವರನ್ನು ಹೊರ ಬರದಂತೆ ಪರಿಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎಸ್.ಶಿವಪ್ರಸಾದ್, ಟಿ.ಆರ್. ಸದಾಶಿವಯ್ಯ, ರಂಗನಾಯಕ್, ವೈ.ಹೆಚ್. ಹುಚ್ಚಯ್ಯ ಮತ್ತಿತರರು ಉಪಸ್ಥಿತರಿದ್ದರು.

 

Leave a Comment