ಸಾಂಸ್ಕೃತಿಕ ರಂಗಕ್ಕೆ ಮಹಿಳೆಯರ ಕೊಡುಗೆ ಅಪಾರ

ತುಮಕೂರು, ಫೆ. ೧೧- ಶಿಕ್ಷಣ, ಕ್ರೀಡೆ ಮಾತ್ರವಲ್ಲದೆ ಸಾಂಸ್ಕೃತಿಕ ರಂಗದ ಕೊಡುಗೆಯಲ್ಲೂ ಮಹಿಳೆಯರದ್ದು ಬಹುಪಾಲು ಇದೆ ಎಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.

ನಗರದ ಬಾಲಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಗಳ ಸಹಯೋಗದೊಂದಿಗೆ ಏರ್ಪಡಿಸಿದ್ದ ಮಹಿಳಾ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಇಂದು ಸಮಾಜದಲ್ಲಿ ಪುರುಷರಷ್ಟೇ ಸಮಾನತೆಯನ್ನು ಪಡೆದುಕೊಳ್ಳುವುದರ ಜತೆಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಮಹಿಳಾ ಸಾಂಸ್ಕೃತಿಕ ಉತ್ಸವದ ಮೂಲಕ ಮಹಿಳೆಯರಲ್ಲಿರುವ ಪ್ರತಿಭೆಯನ್ನು ಪ್ರದರ್ಶನ ಮಾಡಲು ಪ್ರತ್ಯೇಕ ವೇದಿಕೆ ಕಲ್ಪಿಸಿರುವುದು ಸ್ವಾಗತಾರ್ಹ. ಮಹಿಳೆಯರು ಇಂತಹ ಕಾರ್ಯಕ್ರಮಗಳನ್ನು ಸದುಪಯೋಗಪಡಿಸಿಕೊಂಡು ರಾಷ್ಟ್ರಮಟ್ಟದಲ್ಲಿ ಕೀರ್ತಿ ತರಬೇಕು ಎಂದು ಆಶಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಮಹಿಳೆಯರು ಅಡುಗೆ ಮನೆಗಷ್ಟೇ ಸೀಮಿತವಾಗದೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಪುರುಷರಿಗಿಂತ ಉನ್ನತ ಮಟ್ಟದ ಹುದ್ದೆಗಳಲ್ಲಿ ನಾವಿಂದು ಮಹಿಳೆಯರನ್ನು ಕಾಣಬಹುದಾಗಿದೆಯಲ್ಲದೆ, ಯಾವುದೇ ಕ್ಷೇತ್ರವಿರಲಿ ಉತ್ತಮ ಸಾಧನೆ ಮಾಡುವ ಗುಣ ಅವರಿಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಹಿಳೆಯರು ಸಾಧನೆ ಮಾಡಬೇಕು ಎಂದು ಆಶಿಸಿದರು.

ಪಾಲಿಕೆ ಮೇಯರ್ ಲಲಿತಾ ರವೀಶ್ ಮಾತನಾಡಿ, ಮಹಿಳೆಯರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ ಸಂಪೂರ್ಣವಾಗಿ ನಿಲ್ಲಬೇಕು. ಹೆಣ್ಣು ಮಕ್ಕಳು ದುಡಿದರೆ ಒಂದು ಹೆಜ್ಜೆ ಮುಂದೆ ಹೋದಂತೆ ಎಂಬ ಮಾತಿನಂತೆ ಇಂದು ಬಹುತೇಕ ಎಲ್ಲಾ ಮಹಿಳೆಯರು ದುಡಿಯುವ ಮೂಲಕ ಕುಟುಂಬಕ್ಕೆ ಆಸರೆಯಾಗಿದ್ದಾಳೆ  ಎಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಬಾ.ಹ. ರಮಾಕುಮಾರಿ ಮಾತನಾಡಿ, ಮಹಿಳೆಯರು ಸಮಾಜಮುಖಿ ಆಲೋಚನೆಗಳನ್ನು ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಮಹಿಳೆಯರು ಶೇ. 100 ರಷ್ಟು ಮತದಾನ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಪಾಲಿಕೆ ಉಪಮೇಯರ್ ರೂಪಶ್ರೀ, ಪಾಲಿಕೆ ಸದಸ್ಯೆ ಚಂದ್ರಕಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್. ನಟರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜಪ್ಪ ಆಪಿನಕಟ್ಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅಂಬಿಕಾ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಚನ್ನಕೇಶವ ಮತ್ತಿತರರು ಉಪಸ್ಥಿತರಿದ್ದರು.

Leave a Comment