ಸಾರ್ವಜನಿಕರ ಕೆಲಸ ಪ್ರಾಮಾಣಿಕವಾಗಿ ಮಾಡಲು ಅಧಿಕಾರಿಗಳಿಗೆ ಸೂಚನೆ

ತುಮಕೂರು, ಮೇ ೨೩- ಅಧಿಕಾರಿಗಳು ಕೆಲಸ ಮಾಡುತ್ತಾರೆ ಎಂದು ಕೆಡಿಪಿ ಸಭೆಗೆ ಬರುವುದಿಲ್ಲ. ಆದರೆ ಅದು ದುರುಪಯೋಗವಾಗುವುದು ಬೇಡ. ಸಭೆಗೆ ಬಂದು ಮಾತನಾಡುವುದಕ್ಕೆ ಬರುತ್ತದೆ. ಆದರೆ ಸಾರ್ವಜನಿಕರ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿಕೊಂಡು ಹೋಗಿ ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಅಧಿಕಾರಿಗಳಿಗೆ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಯಬೇಕು. ಶಾಸಕರ ಅನುದಾನದಲ್ಲಿ ಪ್ರತಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಮೂರು ಕೊಳವೆ ಬಾವಿ ಕೊರೆಯುವಂತೆ ಗ್ರಾಮೀಣ ಕುಡಿಯುವ ನೀರು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿ 26 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಆಯಾ ಗ್ರಾ.ಪಂ. ವ್ಯಾಪ್ತಿಯವರನ್ನು ಅಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ ಎಂದು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್ ಶಾಸಕರಿಗೆ ಮಾಹಿತಿ ನೀಡಿದರು.
ಅಲೆಮಾರಿಗಳಿಗೆ ಮನೆ ಹಾಗೂ ನಿವೇಶನ ನೀಡಲು ಕ್ರಮ ವಹಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ತುಮಕೂರು, ಚಿತ್ರದುರ್ಗ ಜಿಲ್ಲೆಯನ್ನು ಪೈಲೆಟ್ ಆಗಿ ಆಯ್ಕೆ ಮಾಡಿದ್ದು ಅಲೆಮಾರಿ ಸಮುದಾಯಗಳಿಗೆ ಮನೆ ಹಾಗೂ ನಿವೇಶನ ಹಂಚಲು ನಿರ್ಧರಿಸಲಾಗಿದ್ದು, ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿರುವವರ ಪಟ್ಟಿಯನ್ನು ಸಿದ್ಧಪಡಿಸುವಂತೆ ತಹಶೀಲ್ದಾರ್ ಹಾಗೂ ತಾ.ಪಂ.ಇಒಗಳಿಗೆ ಸೂಚನೆ ನೀಡಿದರು.
ಬಗರ್ ಹುಕುಂ ಕಮಿಟಿಯನ್ನು ಶೀಘ್ರ ರಚಿಸಬೇಕು ಹಾಗೂ ಸರ್ಕಾರ ಮರು ಅರ್ಜಿ ಸಲ್ಲಿಸಲು ಅವಕಾಶ ನೀಡಿರುವುದರಿಂದ ಬಗರ್ ಹುಕುಂ ಕಮಿಟಿ ರಚನೆಯಾದ ನಂತರವೇ ತೀರ್ಮಾನ ತೆಗೆದುಕೊಳ್ಳಬೇಕು. ಸ್ಥಳ ಪರಿಶೀಲನೆ ನಡೆಸಿದ ನಂತರವೇ ಮಂಜೂರಾತಿಯನ್ನು ನೀಡಬೇಕೆಂದು ತಹಶೀಲ್ದಾರ್ ಮೋಹನ್‌ಕುಮಾರ್ ಅವರಿಗೆ ಸೂಚನೆ ನೀಡಿದರು.
ಆಶ್ರಯ ಯೋಜನೆಯಡಿ ನಿವೇಶನ ಹಂಚಲು ಭೂಮಿ ಪರಿಶೀಲನೆ ಕೈಗೊಳ್ಳಬೇಕು ಎಂದು ತಹಶೀಲ್ದಾರ್‌ಗೆ ಸೂಚನೆ ನೀಡಿದರು.
ಈಗಾಗಲೇ ಹಲವು ಗ್ರಾಮ ಪಂಚಾಯ್ತಿಗಳಲ್ಲಿ ಭೂಮಿ ಪರಿಶೀಲನೆ ಮಾಡಿ ನಕ್ಷೆಯನ್ನು ಸಿದ್ಧಪಡಿಸಲಾಗಿದ್ದು, ಅನುಮೋದನೆ ಪಡೆದ ನಂತರ ಸರ್ಕಾರ ಕಳುಹಿಸಲಾಗುವುದು ಎಂದು ಶಾಸಕರಿಗೆ ಮಾಹಿತಿ ನೀಡಿದರು.
ಕೃಷಿ ಹಾಗೂ ತೋಟಗಾರಿಕೆ ಇಲಾಖೆಗೆ ಬಂದಿರುವ ಅನುದಾನ ಯೋಜನೆಗಳ ಮಾಹಿತಿ ಪಡೆದ ಶಾಸಕರು, ಬಾಳೆ ಹಾಗೂ ತೆಂಗು ಬೆಳೆ ಹಾನಿಗೆ ಸಂಬಂಧಿಸಿದಂತೆ ರೈತರಿಗೆ ಅನುಕೂಲ ಮಾಡಿಕೊಂಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವಂತೆ ತಿಳಿಸಿದ ಅವರು, ಹೂ ಬೆಳೆಗಾರರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರ ವಿತರಣೆಗೆ ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಪಡೆದರು.
ಹೂ ಬೆಳೆಗಾರರಿಗೆ ನೀಡುವ ಪರಿಹಾರಕ್ಕೆ ಸ್ಥಳ ಪರಿಶೀಲನೆ ಮಾಡುವುದು ಅವಶ್ಯಕವಾಗಿದೆ. ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಬೇಕಾಗಿದ್ದು, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರವನ್ನು ವರ್ಗಾವಣೆ ಮಾಡಲಾಗುವುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು ತಿಳಿಸಿದರು.
ಲೋಕೋಪಯೋಗಿ ಇಲಾಖೆಯಡಿ ಓಆರ್ಎಫ್ ಅಡಿಯಲ್ಲಿ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು. ಕಾಮಗಾರಿ ಆರಂಭಿಸಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು. ಕೊರೋನಾ ಹಿನ್ನೆಲೆಯಲ್ಲಿ ನಿಂತಿರುವ ಕಾಮಗಾರಿಗೆ ಚಾಲನೆ ನೀಡಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ರೇಷ್ಮೆ ಇಲಾಖೆ, ಪಶು ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment