ಸಾಲಮನ್ನಾಕ್ಕೆ ಒತ್ತಾಯಿಸಿ ರಸ್ತೆ ತಡೆ ಚಳುವಳಿ

ರಾಯಚೂರು.ಫೆ.17- ರೈತರ ಮತ್ತು ಸ್ತ್ರೀ ಶಕ್ತಿ ಗುಂಪುಗಳು ಖಾಸಗಿ ಹಾಗೂ ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಪಡೆದಿರುವ ಸಾಲಮನ್ನಾ ಮಾಡಬೇಕು ಮತ್ತು ಸಮರ್ಪಕವಾಗಿ ಬರಗಾಲ ಪರಿಹಾರ ವಿತರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ಸ್ಥಳೀಯ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ಚಳುವಳಿ ನಡೆಸಿ ಪ್ರತಿಭಟನೆ ನಡೆಸಿತು.

ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಕೃಷಿ ಚಟುವಟಿಕೆ ಕೈಗೆತ್ತಿಕೊಳ್ಳಲು ರೈತರು ವಿವಿಧ ಬ್ಯಾಂಕ್‌ಗಳಲ್ಲಿ ಪಡೆದಿರುವ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರಕಾರ ರೈತರ ಮತ್ತು ಕೃಷಿ ಕೂಲಿ ಕಾರ್ಮಿಕರ ಬಗ್ಗೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಖಂಡನೀಯ.

ಮಹಾತ್ಮಾಗಾಂಧಿ ಉದ್ಯೋಗಖಾತ್ರಿ ಯೋಜನೆಯ ಕೆಲಸವನ್ನು 200 ದಿನಕ್ಕೆ ವಿಸ್ತರಿಸಿ ಪ್ರತಿದಿನ 600 ರೂ. ಕೂಲಿ ಪಾವತಿಸಬೇಕು. ಬಡವರಿಗೆ ಉಚಿತವಾಗಿ ಅಗತ್ಯ ಪಡಿತರ ಚೀಟಿ ವಿತರಿಸಬೇಕು. ಕೂಪನ್ ಪದ್ಧತಿ ಕೈಬಿಡಬೇಕು. ಮತ್ತು ಪ್ರತಿ ಗ್ರಾಮಗಳಲ್ಲಿ ಮೇವಿನ ಬ್ಯಾಂಕ್ ತೆರೆಯಬೇಕು. ಜಿಲ್ಲೆ ಸೇರಿ ರಾಜ್ಯಾದ್ಯಂತ ಭೀಕರ ಬರ ಆವರಿಸಿರುವ ಹಿನ್ನೆಲೆ ರೈತರ, ಕೃಷಿ ಕಾರ್ಮಿಕರು ಗೂಳೆ ಹೋಗುವುದನ್ನು ತಡೆಗಟ್ಟಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಬೇಕೆಂದು ಆಗ್ರಹಿಸಿದರು. ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಶೀಘ್ರವೇ ವಿತರಿಸಬೇಕು. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 10 ಲಕ್ಷ ರೂ.ವಿತರಿಸಬೇಕು ಸೇರಿ ಇನ್ನಿತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೆ.ಜಿ.ವೀರೇಶ, ರಂಗನಗೌಡ ಕೊತ್ತದೊಡ್ಡಿ, ರಂಗಪ್ಪ ಯಾಪಲದಿನ್ನಿ, ಕರಿಯಪ್ಪ ಅಚ್ಚೊಳ್ಳಿ, ಸತ್ಯಪ್ಪ, ವರಲಕ್ಷ್ಮಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Leave a Comment