ಸ್ಪೀಕರ್ ಜತೆ ಸಿದ್ದು ಚರ್ಚೆ

ಬೆಂಗಳೂರು, ಜು. ೧೧- ಅತೃಪ್ತ ಶಾಸಕರು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಬಹು ಹೊತ್ತಿನವರೆಗೆ ಚರ್ಚೆ ನಡೆಸಿರುವುದು ರಾಜಕೀಯ ಕುತೂಹಲ ಕೆರಳಿಸಿದೆ.
ಅತೃಪ್ತ ಶಾಸಕರು ರಾಜೀನಾಮೆನೀಡಿರುವ ಕುರಿತು ಉಭಯನಾಯಕರು ಮುಂದಿನ ನಡೆಯಬಗ್ಗೆ ಸುದೀರ್ಘ ಸಮಾಲೋಚನೆ ನಡೆಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಪರ ವಕೀಲರು ಹಾಜರಿದ್ದರು.
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಈಗಾಗಲೇ ದೂರು ನೀಡಿರುವುದರಿಂದ ಆ ಬಗ್ಗೆ ಪುನರ್ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ, ಸ್ಪೀಕರ್ ರಮೇಶ್ ಕುಮಾರ್ ಅವರೊಂದಿಗೆ ಚರ್ಚೆ ನಡೆಸಿದರು.
ಒಂದೂವರೆ ಗಂಟೆಗೂ ಹೆಚ್ಚು ಸಮಯ ಸ್ಪೀಕರ್‌ ಅವರೊಂದಿಗೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಚರ್ಚೆ ನಡೆಸಿ ಮುಂದಿನ ಆಗು ಹೋಗುಗಳ ಬಗ್ಗೆ ಸಮಾಲೋಚನೆ ನಡೆಸಿದರು.
ಶಾಸಕರು ಹಾಜರಾದ ಬಳಿಕ ಸ್ಪೀಕರ್ ಕೈಗೊಳ್ಳುವ ಮುಂದಿನ ನಿರ್ಧಾರ ಸಮ್ಮಿಶ್ರ ಸರ್ಕಾರದ ಅಳಿವು- ಉಳಿವು ನಿರ್ಧರಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಸ್ಪೀಕರ್ ಅವರೊಂದಿಗೆ ಚರ್ಚೆ ನಡೆಸಿದರು.

Leave a Comment