ಹೆಚ್‌ಡಿಕೆ- ಡಿಕೆಶಿ ಚರ್ಚೆ ಕುತೂಹಲಕ್ಕೆ ಎಡೆ

ಹುಬ್ಬಳ್ಳಿ, ಡಿ. ೨- ಈ ತಿಂಗಳ 5 ರಂದು ನಡೆಯಲಿರುವ ವಿಧಾನಸಭೆಯ ಉಪಚುನಾವಣೆ ಕಾವು ರಂಗೇರುತ್ತಿದ್ದು, ಒಬ್ಬರು ಮತ್ತೊಬ್ಬರ ಮೇಲೆ ಆರೋಪ ಪ್ರತ್ಯಾರೋಪ ಮಾಡುತ್ತಿರುವ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಡಿ.ಕೆ. ಶಿವಕುಮಾರ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಈ ಇಬ್ಬರು ನಾಯಕರು ಅರ್ಧಗಂಟೆಗೂ ಹೆಚ್ಚು ಕಾಲ ರಾಜಕಾರಣದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಉಪಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್, ಜೆಡಿಎಸ್ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಇಬ್ಬರ ಮಾತುಕತೆ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳಬೇಕಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೆಲಿಕ್ಯಾಪ್ಟರ್ ಹವಾಮಾನ ವೈಪರೀತ್ಯದಿಂದ ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಿತ್ತು.
ಹುಬ್ಬಳ್ಳಿಯಲ್ಲಿ ಪ್ರಚಾರ ಮುಗಿಸಿ, ಬೆಂಗಳೂರಿಗೆ ತೆರಳಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿಯೊಂದಿಗೆ ವಿಮಾನ ನಿಲ್ದಾಣದ ಲ್ಯಾಂಡ್‌ನಲ್ಲಿ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ.

30 ಬಾರಿ ನೋಟಸ್
ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಅವರ ಕುಟುಂಬದ ಸದಸ್ಯರಿಗೆ ನವೆಂಬರ್ ತಿಂಗಳಲ್ಲಿ 30 ಬಾರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನೋಟೀಸ್ ನೀಡಿದ್ದಾರೆ.
ಐಟಿ ನೋಟೀಸ್ ಹಿನ್ನೆಲೆಯಲ್ಲಿ ಅಥಣಿ, ಕಾಗವಾಡ ಕ್ಷೇತ್ರದಲ್ಲಿಂದು ವಿಧಾನಸಭಾ ಉಪಚುನಾವಣೆ ಪ್ರಚಾರ ಕೈಗೊಳ್ಳಬೇಕಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಪ್ರವಾಸ್ ರದ್ದು ಮಾಡಿದ್ದಾರೆ.
ನಿನ್ನೆ ರಾಣೇಬೆನ್ನೂರ ಹಾಗೂ ಹಿರೇಕೆರೂರ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಂಡಿದ್ದ ಶಿವಕುಮಾರ್ ಇಂದು ಬೆಳಗಾವಿ ಜಿಲ್ಲೆಯ ಕಾಗವಾಡ ಹಾಗೂ ಅಥಣಿ ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಲಿದ್ದರು.
ಆದರೆ ಐಟಿ ಇಲಾಖೆ ಡಿ.ಕೆ. ಶಿವಕುಮಾರ್ ಅವರಿಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದು, ಅವರು ತಮ್ಮ ಪ್ರಚಾರ ಕಾರ್ಯವನ್ನು ಸ್ಥಗಿತಗೊಳಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

Leave a Comment