Home ಜಿಲ್ಲೆ ಆ.20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ: ಎಡಿಸಿ ಇ....

ಆ.20 ರಂದು ಡಿ. ದೇವರಾಜ ಅರಸು ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ಸಿದ್ಧತೆ: ಎಡಿಸಿ ಇ. ಬಾಲಕೃಷ್ಣ

ಸಂಜೆವಾಣಿ ವಾರ್ತೆ

ಹೊಸಪೇಟೆ.ಆ.14 ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ಹಿತರಕ್ಷಕ ಹಾಗೂ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರ ಜಯಂತಿಯನ್ನು ಆ.20 ರಂದು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಡಿ. ದೇವರಾಜ ಅರಸು ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಾಡಿನ ಅಭಿವೃದ್ಧಿ ಮತ್ತು ಸಾಮಾಜಿಕ ಸುಧಾರಣೆಗೆ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಕೊಡುಗೆ ಅಪಾರ. 1973ರ ನವೆಂಬರ್ 1 ರಂದು ಅಂದಿನ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂದು ಮರು ನಾಮಕರಣ ಮಾಡಿದ ಹೆಗ್ಗಳಿಕೆ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಕನ್ನಡ ನಾಡಿನ ಏಕೀಕರಣ, ಸಾಮಾಜಿಕ ಕ್ರಾಂತಿ ಮತ್ತು ನಾಡಿನ ಅಸ್ಮಿತೆಗೆ ಅವರು ನೀಡಿದ ಕೊಡುಗೆ ಚಿರಸ್ಮರಣೀಯವಾಗಿದೆ ಎಂದರು.

ಜಯಂತಿಯ ಅಂಗವಾಗಿ ಜಿಲ್ಲೆಯ ವಿವಿಧ ಹಿಂದುಳಿದ ವರ್ಗಗಳ ಹಾಗೂ ಪರಿಶಿಷ್ಟ ಜಾತಿ, ಪಂಗಡಗಳ ವಿದ್ಯಾರ್ಥಿನಿಲಯಗಳಲ್ಲಿ ಕ್ರೀಡೆ, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮತ್ತು ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಬಹುಮಾನ ವಿತರಿಸಲಾಗುವುದು. ಅರಸು ಅವರ ಜೀವನ ಚರಿತ್ರೆ, ಉಳುವವನೇ ಭೂಮಿಯ ಒಡೆಯ ಕಾಯ್ದೆ ಹಾಗೂ ಅವರ ಸಾಮಾಜಿಕ ಕ್ರಾಂತಿಕಾರಿ ನಿರ್ಧಾರಗಳ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳು ಮತ್ತು ಉಪನ್ಯಾಸಕರಿಂದ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಹಾಗೂ ಸಾರ್ವಜನಿಕರಿಗೆ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ನಡೆಯುವ ಸಭಾಂಗಣದ ನೈರ್ಮಲ್ಯ, ಕುಡಿಯುವ ನೀರು, ಆಸನ ವ್ಯವಸ್ಥೆ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಶಿಕಲಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರವಿಕುಮಾರ್, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.