ನವದೆಹಲಿ,ಜೂ.13-ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ.ಇಸ್ರೇಲ್ ಮತ್ತು ಇರಾನ್ ನಡುವಿನ ಈ ಸಂಘರ್ಷಕ್ಕೆ ಭಾರತ ತೀವ್ರ ಆತಂಕ ವ್ಯಕ್ತಪಡಿಸಿದೆ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ.
ಪಶ್ಚಿಮ ಏಷ್ಯಾದಲ್ಲಿ ಪ್ರಸ್ತುತ ಉಂಟಾಗಿರುವ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗದಂತೆ ಎರಡೂ ದೇಶಗಳು ಎಚ್ಚರಿಕೆ ವಹಿಸಬೇಕೆಂದು ಒತ್ತಾಯಿಸಲಾಗಿದೆ.
ರಾಜತಾಂತ್ರಿಕವಾಗಿ ವಿವಾದವನ್ನು ಶಮನಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು
ಭಾರತವು ಎರಡೂ ದೇಶಗಳೊಂದಿಗೆ ನಿಕಟ ಮತ್ತು ಸ್ನೇಹಪರ ಸಂಬಂಧವನ್ನು ಹೊಂದಿದೆ. ಸಾಧ್ಯವಿರುವ ಎಲ್ಲ ಸಹಕಾರವನ್ನು ಒದಗಿಸಲು ಭಾರತ ಸಿದ್ಧ ಎಂದು ಹೇಳಿಕೆ ನೀಡಲಾಗಿದೆ.
ಕೇಂದ್ರ ವಿದೇಶಾಂಗ ಸಚಿವಾಲಯ ಈ ಪ್ರದೇಶದ ಭಾರತೀಯ ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.ಜೊತೆಗೆ ಸ್ಥಳೀಯ ಆಡಳಿತಗಳ ಭದ್ರತಾ ಸಲಹೆಗಳನ್ನು ಅನುಸರಿಸಲು ಮನವಿ ಮಾಡಿದೆ.
ಅಂತರರಾಷ್ಟ್ರೀಯ ಮಾಧ್ಯಮ ವರದಿಗಳ ಪ್ರಕಾರ, ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಇಸ್ರೇಲ್ ಪರಮಾಣು ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿದೆ. ಇರಾನ್ ಕೂಡ ಪ್ರತೀಕಾರದ ದಾಳಿಗಳನ್ನು ನಡೆಸಿದೆ ಎಂದು ವರದಿಯಾಗಿದೆ.