Home ಜಿಲ್ಲೆ ಮಂಗಳೂರು ಉಡುಪಿ: ಶಾಲಾ ವಾಹನಗಳ ಮೇಲೆ ಪೊಲೀಸ್ ವಿಶೇಷ ತಪಾಸಣೆ: ೪೮೩ ವಾಹನಗಳ ಪರಿಶೀಲನೆ, ೨೦೩ ಪ್ರಕರಣ...

ಉಡುಪಿ: ಶಾಲಾ ವಾಹನಗಳ ಮೇಲೆ ಪೊಲೀಸ್ ವಿಶೇಷ ತಪಾಸಣೆ: ೪೮೩ ವಾಹನಗಳ ಪರಿಶೀಲನೆ, ೨೦೩ ಪ್ರಕರಣ ದಾಖಲು

ಉಡುಪಿ-ಶಾಲಾ ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಉಡುಪಿ ಜಿಲ್ಲೆಯಾದ್ಯಂತ ಮಂಗಳವಾರ ಪೊಲೀಸ್ ಇಲಾಖೆ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಸಂಚಾರ ಹಾಗೂ ಶಾಲಾ ವಾಹನ ಸುರಕ್ಷತಾ ನಿಯಮ ಉಲ್ಲಂಘಿಸಿದ ೨೦೩ ಪ್ರಕರಣಗಳನ್ನು ದಾಖಲಿಸಿ ?೭೧,೦೦೦ ದಂಡ ವಸೂಲಿ ಮಾಡಲಾಗಿದೆ.
ಸಾರ್ವಜನಿಕರಿಂದ ಬಂದ ಅಹವಾಲುಗಳು ಹಾಗೂ ಜು.೪ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ನೀಡಿದ ಸೂಚನೆಯ ಮೇರೆಗೆ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು.
ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶಾಲಾ ಬಸ್ಗಳು, ವ್ಯಾನ್ಗಳು, ಆಟೋ ರಿಕ್ಷಾಗಳು ಹಾಗೂ ಶಾಲಾ ಮಕ್ಕಳನ್ನು ಶಾಲೆಗೆ ಕರೆತರುವ ಮತ್ತು ಮನೆಗೆ ಕರೆದೊಯ್ಯುವ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ವಾಹನಗಳ ದಾಖಲೆಗಳು, ಫಿಟ್ನೆಸ್ ಪ್ರಮಾಣಪತ್ರ, ವಿಮೆ, ಚಾಲನಾ ಪರವಾನಗಿ, ಶಾಲಾ ವಾಹನಗಳಿಗೆ ಕಡ್ಡಾಯವಾಗಿರುವ ಸುರಕ್ಷತಾ ಮಾನದಂಡಗಳು, ಅಗ್ನಿಶಾಮಕ ಉಪಕರಣ, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ತುರ್ತು ನಿರ್ಗಮನ ವ್ಯವಸ್ಥೆ ಹಾಗೂ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುತ್ತಿರುವ ಕುರಿತು ಪರಿಶೀಲನೆ ನಡೆಸಲಾಯಿತು.
ತಪಾಸಣೆಯಲ್ಲಿ ನಿಯಮ ಉಲ್ಲಂಘನೆ ಕಂಡುಬಂದ ವಾಹನಗಳ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಯಿತು. ಜೊತೆಗೆ ವಾಹನ ಚಾಲಕರು, ನಿರ್ವಾಹಕರು ಹಾಗೂ ಶಾಲಾ ಆಡಳಿತ ಮಂಡಳಿಗಳಿಗೆ ಮಕ್ಕಳ ಸುರಕ್ಷತೆಯನ್ನು ಅತ್ಯುನ್ನತ ಆದ್ಯತೆಯಾಗಿ ಪರಿಗಣಿಸಿ ಎಲ್ಲಾ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಯಿತು.
ಮುಂದಿನ ದಿನಗಳಲ್ಲಿಯೂ ಇಂತಹ ವಿಶೇಷ ತಪಾಸಣಾ ಕಾರ್ಯಾಚರಣೆಗಳನ್ನು ನಿರಂತರವಾಗಿ ನಡೆಸಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.