ಸಂಜೆವಾಣಿ ನ್ಯೂಸ್
ಮೈಸೂರು,ಸೆ.11:- ರಾಜ್ಯದ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‍ಆರ್‍ಐ ಕೋಟಾ ರದ್ದುಪಡಿಲು ಆಗ್ರಹಿಸಿ ಎಐಡಿಎಸ್‍ಒ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಮಾಡಿದರು.
2025-26ನೇ ಸಾಲಿನಿಂದ ರಾಜ್ಯದ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ.15 ಎನ್‍ಆರ್‍ಐ ಕೋಟಾ ಆರಂಭಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ನಿರ್ಧಾರ ವೈದ್ಯಕೀಯ ಶಿಕ್ಷಣದ ಕನಸು ಹೊತ್ತ ರಾಜ್ಯದ ಬಡ ವಿದ್ಯಾರ್ಥಿಗಳನ್ನು ಆತಂಕಕ್ಕೆ ತಳ್ಳಿದೆ. ಈಗಾಗಲೇ ಅಖಿಲ ಭಾರತ ಕೋಟಾದಡಿ ಶೇ.15 ಸೀಟುಗಳನ್ನು ನೀಡಲಾಗುತ್ತಿದೆ. ಇನ್ನೂ ಶೇ.15 ಸೀಟುಗಳು ಎನ್‍ಆರ್‍ಐ ಕೋಟಾಗೆ ನೀಡಿದರೆ 200 ವಿದ್ಯಾರ್ಥಿಗಳ ಒಂದು ಬ್ಯಾಚಿನಲ್ಲಿ 140 ಸೀಟುಗಳು ಮಾತ್ರ ರಾಜ್ಯದ ವಿದ್ಯಾರ್ಥಿಗಳಿಗೆ ಉಳಿದಂತಾಗುತ್ತದೆ ಎಂದು ಕಿಡಿಕಾರಿದರು.
ಸರಕಾರಿ ವೈದ್ಯಕೀಯ ಕಾಲೇಜುಗಳು ಆರ್ಥಿಕ ಹಿನ್ನೆಲೆ ಲೆಕ್ಕಿಸದೆ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಒದಗಿಸಲು ಸ್ಥಾಪಿಸಲಾಗಿದೆ. ಶ್ರೀಮಂತ ಎನ್‍ಆರ್‍ಐ ವಿದ್ಯಾರ್ಥಿಗಳಿಗೆ ಸೀಟುಗಳನ್ನು ಮೀಸಲಿಡುವ ಮೂಲಕ, ವೈದ್ಯರಾಗಿ ಸಮಾಜಕ್ಕೆ ಸೇವೆ ಸಲ್ಲಿಸಲು ಬಯಸುವ ನೂರಾರು ಶ್ರಮಜೀವಿ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಅವಕಾಶ ಕಡಿತಗೊಳಿಸಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 12,447 ಬೋಧಕ ಹುದ್ದೆಗಳು ಖಾಲಿ ಇರುವ ಸಮಯದಲ್ಲಿ, ಈ ಹುದ್ದೆಗಳನ್ನು ಭರ್ತಿ ಮಾಡಲು ಮತ್ತು ಮೂಲಸೌಕರ್ಯ ಸುಧಾರಿಸಲು ಆದ್ಯತೆ ನೀಡಬೇಕು.
ಬೋಧಕ ವರ್ಗ ಮತ್ತು ಸೌಲಭ್ಯ ಬಲಪಡಿಸುವುದು ನಿಜವಾದ ಅಗತ್ಯವಾಗಿದೆ. ಈ ಅಗತ್ಯಗಳನ್ನು ಪೂರೈಸಲು ಸರಕಾರ ಮುಂದಾಗಬೇಕು ಮತ್ತು ಶೇ.15 ಎನ್‍ಆರ್‍ಐ ಕೋಟಾ ರದ್ದುಗೊಳಿಸುವ ಮೂಲಕ ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಈ ನಿರ್ಧಾರ ಸರಕಾರಿ ಕಾಲೇಜುಗಳನ್ನು ಖಾಸಗಿ ಸಂಸ್ಥೆಗಳಂತೆ ಲಾಭಗಳಿಸುವ ಕೇಂದ್ರಗಳಾಗಿ ಪರಿವರ್ತಿಸುವ ಅಪಾಯಕಾರಿ ಹೆಜ್ಜೆಯಾಗಿದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ನಿತಿನ್, ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿಗಳಾದ ಚಂದ್ರಿಕಾ, ದಿಶ, ಅಂಜಲಿ ಸೇರಿದಂತೆ ಹಲವರು ಭಾಗವಹಿಸಿದ್ದರು.

























