
ಸಂಜೆವಾಣಿ ವಾರ್ತೆ
ಮಂಡ್ಯ.ಡಿ.10:- ಕಳೆದ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ದಾಖಲಾಗಿದ್ದ ಶಾಲೆಗಳಿಗೆ ಜಿ.ಪಂ.ಸಿಇಓ ನಂದಿನಿ ಕೆ.ಆರ್.ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳವಾರ ಕೃಷ್ಣರಾಜ ಪೇಟೆ ತಾಲ್ಲೂಕಿನ ಸಿಂಧಘಟ್ಟ ಗ್ರಾಮದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಶಾಲೆಯಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಕನ್ನಡ ಭಾಷೆಯ ಪಠ್ಯವನ್ನು ಸರಿಯಾಗಿ ಬೋದನೆ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಸಿಇಓ ರವರಿಗೆ ತಿಳಿಸಿದರು. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರು ನಾಳೆಯೇ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳು ತಿಳಿಸಿರುವ ವಿಷಯದ ಬಗ್ಗೆ ಪರಿಶೀಲಿಸಿ ಒಂದು ವಾರದೊಳಗೆ ಸೂಕ್ತ ಕ್ರಮ ತೆಗೆದುಕೊಂಡು ವರದಿ ಸಲ್ಲಿಸಲು ಸೂಚಿಸಿದರು.
ಮಧ್ಯಾಹ್ನ ಬಿಸಿ ಊಟ ಯೋಜನೆಯಡಿ ಶಾಲೆಗೆ ಸರಬರಾಜು ಮಾಡಿರುವ ಅಡುಗೆ ಎಣ್ಣೆಯ ಅವಧಿ ಮುಕ್ತಾಯ ವಾಗಿರುವುದನ್ನು ಗಮನಿಸಲಾಗಿದ್ದು, ಈ ಬಗ್ಗೆ ಮಧ್ಯಾಹ್ನ ಬಿಸಿ ಊಟ ಯೋಜನೆಯ ಶಿಕ್ಷಣಾಧಿಕಾರಿ ಮತ್ತು ಸಹಾಯಕ ನಿರ್ದೇಶಕರು ಪರಿಶೀಲಿಸಿ ವರದಿ ನೀಡುವಂತೆ ಜಿ.ಪಂ. ಸಿಇಓ ಸೂಚಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಭೇಟಿ: ಸಿಂದಘಟ್ಟ ಗ್ರಾಮದಲ್ಲಿನ 3 ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕೆಯ ವಿಧಾನ, ಪೌಷ್ಠಿಕ ಆಹಾರ ವಿತರಣೆ, ಮೂಲಭೂತ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.ವಿಶೇಷ ಚೇತನ ಅಂಗನವಾಡಿ ಕಾರ್ಯಕರ್ತೆ ತುಳಸಿ ರವರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದು, ಈ ಬಗ್ಗೆ ಮಕ್ಕಳ ಕಲಿಕಾ ಮಟ್ಟವನ್ನು ಪರಿಶೀಲಿಸಿ ತುಳಸಿರವರ ಕಾರ್ಯವನ್ನು ಪ್ರಶಂಸಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ: ಸಿಂದಘಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರು ಮತ್ತು ರೋಗಿಗಳೊಂದಿಗೆ ಸಂವಾದ ನಡೆಸಿ ಆಸ್ಪತ್ರೆಯಲ್ಲಿ ದೊರೆಯುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆ ಇದೆ. ಆದರೂ ಉತ್ತಮ ಚಿಕಿತ್ಸೆ ದೊರೆಯುತ್ತಿದೆ ಎಂದು ಸಾರ್ವಜನಿಕರು ಮಾಹಿತಿ ನೀಡಿದರು.
ಆಸ್ಪತ್ರೆಯಲ್ಲಿನ ಔಷದಿಗಳು ಮತ್ತು ಇತರೆ ಸೌಲಭ್ಯಗಳ ಬಗ್ಗೆ ವೈದ್ಯರು ಮತ್ತು ಸಿಬ್ಬಂದಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಡಿಹೆಚ್‍ಓ ರವರಿಂದ ಮಾಹಿತಿ ಪಡೆದು ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಪಶು ಆಸ್ಪತ್ರೆಯಲ್ಲಿನ ಸೌಲಭ್ಯಗಳ ಪರಿಶೀಲನೆ: ಸಿಂಧಘಟ್ಟ ಗ್ರಾಮದ ಪಶು ಆಸ್ಪತ್ರಗೆ ಭೇಟಿ ನೀಡಿ ಔಷದಿಗಳ ಸಂಗ್ರಹ, ಆಸ್ಪತ್ರೆಯ ಮೂಲಭೂತ ಸೌಲಭ್ಯ ಹಾಗೂ ಲಸಿಕಾಕರಣದ ಬಗ್ಗೆ ಮಾಹಿತಿ ಪಡೆದರು.ಆಸ್ಪತ್ರೆ ವ್ಯಾಪ್ತಿಯಲ್ಲಿ ಗ್ರಾಮಗಳಲ್ಲಿನ ಪಶುಗಳ ಸಂಖ್ಯೆಗೆ ಅನುಗುಣವಾಗಿ ಔಷದಿಗಳ ಸಂಗ್ರಹ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.
ಗ್ರಾ.ಪಂ. ಗ್ರಂಥಾಲಯಕ್ಕೆ ಮೆಚ್ಚುಗೆ: ಸಿಂಧಘಟ್ಟ ಗ್ರಾಮ ಪಂಚಾಯತ್ ಕಚೇರಿಯ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ನಿರ್ವಹಣೆ ಮತ್ತು ಗ್ರಂಥಾಲಯದಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿ ಪಿಡಿಓ ವಾಣಿರ ಹಾಗೂ ಗ್ರಂಥಪಾಲಕರಾದ ವಸಂತಮ್ಮವರನ್ನು ಪ್ರಶಂಸಿಸಿದರು. ಗ್ರಾ.ಪಂ. ನಲ್ಲಿ 2 ಗ್ರಂಥಾಲಯ ಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿ ರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಕಚೇರಿಯ ಅಭಿಲೇಖಾಲಯಕ್ಕೆ ಭೇಟಿ ನೀಡಿ ಗ್ರಾ.ಪಂ.ನ ಕಡತಗಳು ಮತ್ತು ಇ-ಸ್ವತ್ತು ದಾಖಲೆಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಪರಿಶೀಲಿಸಿದರು. ಅಭಿಲೇಖಾಲಯದ ನಿರ್ವಹಣೆ ಕಾಮಗಾರಿ ಪ್ರಗತಿಯಲ್ಲಿದೆ ಹಾಗೂ ಕಡತಗಳನ್ನು ಎ,ಬಿ,ಸಿ,ಡಿ ಎಂದು ವಿಂಗಡಿಸಲಾಗುತ್ತಿದ್ದು ಒಂದು ತಿಂಗಳೊಳಗಾಗಿ ಅಭಿಲೇಖಾಲಯ ಪೂರ್ಣಗೊಳಿಸಲಾಗುವುದು ಎಂದು ಪಿಡಿಓ ರವರು ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದ ಪರಿಶೀಲನೆ: ಸಿಂದಘಟ್ಟ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಹಾಸ್ಟೆಲ್ ನಲ್ಲಿ ನಿಗದಿತ ಮೆನು ಪ್ರಕಾರ ಗುಣಮಟ್ಟದ ಶುಚಿ, ರುಚಿಯಾದ ಊಟೋಪಹಾರ ಒದಗಿಸುತ್ತಿರುವ ಬಗ್ಗೆ ಹಾಗೂ ಶೌಚಾಲಯ, ಮಲಗುವ ಕೋಣೆ ಸೇರಿದಂತೆ ಇತರೆ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ವಸತಿನಿಲಯಗಳಲ್ಲಿನ ಕುಂದು ಕೊರತೆ ಆಲಿಸಲು ನೀಡಲಾಗಿರುವ ಸಹಾಯವಾಣಿ ಸಂಖ್ಯೆಯನ್ನು ಹಾಸ್ಟೆಲ್ ನ ಊಟದ ಹಾಲ್, ನೋಟೀಸ್ ಬೋರ್ಡ್ ಸೇರಿದಂತೆ ಇತರೆ ಕಡೆಗಳಲ್ಲಿ ಅಳವಡಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮೇಗೌಡ ವೈ.ಕೆ,ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರುದ್ರೇಶ್,ಬಿಸಿ ಊಟ ಯೋಜನೆಯ ಸಹಾಯಕ ನಿರ್ದೇಶಕ ಯತೀಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಾಣಿ ಸೇರಿದಂತೆ ಇತರರು ಹಾಜರಿದ್ದರು.

























