
ಸಂಜೆವಾಣಿ ವಾರ್ತೆ
ತಿ.ನರಸೀಪುರ ನ.4- ರಾಜ್ಯದಲ್ಲಿ ಪರಿಶಿಷ್ಟ ಜಾತಿ (ಎಸ್‍ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‍ಟಿ) ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾನೂನು ಹೋರಾಟವನ್ನು ಮುಂದುವರಿಸಲು ಸುಪ್ರೀಂ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಉಗ್ರಪ್ಪ ಆಗ್ರಹಿಸಿದರು.
ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಲ್ಲಿ ವೇದಿಕೆ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‍ಸಿ ಸಮುದಾಯಕ್ಕೆ ಶೇ.17 ಹಾಗೂ ಎಸ್‍ಟಿ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿ ನಿಗದಿಪಡಿಸಿತ್ತು. ಆದರೆ, ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕ್ರಮಗಳಿಗೆ ನ್ಯಾಯಾಲಯದಲ್ಲಿ ತಡೆಯುಂಟಾಗಿರುವುದರಿಂದ ಎರಡೂ ಸಮುದಾಯಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಸರ್ಕಾರ ವಿಳಂಬ ಮಾಡದೆ ಕಾನೂನು ಹೋರಾಟಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಜನಸಂಖ್ಯೆಯಲ್ಲಿ ಎಸ್‍ಸಿ ಸಮುದಾಯದ ಪ್ರಮಾಣ ಶೇ.17.1 ಹಾಗೂ ಎಸ್‍ಟಿ ಸಮುದಾಯದ ಪ್ರಮಾಣ ಶೇ.6.95ರಷ್ಟಿದೆ. ಪ್ರಸ್ತುತ ಎಸ್‍ಸಿಗೆ ಶೇ.15 ಮತ್ತು ಎಸ್‍ಟಿಗೆ ಶೇ.3ರಷ್ಟು ಮೀಸಲಾತಿ ಇದೆ. ಇದನ್ನು ಕ್ರಮವಾಗಿ ಶೇ.17 ಮತ್ತು ಶೇ.7ಕ್ಕೆ ಹೆಚ್ಚಿಸಬೇಕು. ಲೋಕಸಭೆ, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಜನಸಂಖ್ಯೆಯ ಆಧಾರದ ಮೇಲೆ ರಾಜಕೀಯ ಮೀಸಲಾತಿ ಕಲ್ಪಿಸಲಾಗುತ್ತಿದೆ. ಅದೇ ರೀತಿ ಎಸ್‍ಸಿಪಿ?ಟಿಎಸ್‍ಪಿ ಯೋಜನೆಗಳಡಿ ಬಜೆಟ್ ಅನುದಾನವನ್ನೂ ಜನಸಂಖ್ಯೆಗೆ ಅನುಗುಣವಾಗಿ ಹಂಚಿಕೆ ಮಾಡಲಾಗುತ್ತಿದೆ. ಇದೇ ಮಾನದಂಡವನ್ನು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿಯೂ ಅನುಸರಿಸಬೇಕು ಎಂದು ಹೇಳಿದರು.
“ಮೀಸಲಾತಿ ಭಿಕ್ಷೆಯಲ್ಲ; ಅದು ಸಂವಿಧಾನ ನೀಡಿರುವ ಹಕ್ಕು” ಎಂದು ಪ್ರತಿಪಾದಿಸಿದ ಉಗ್ರಪ್ಪ, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಆಯೋಗವು 2020ರ ಜುಲೈ 2ರಂದು ಎಸ್‍ಸಿಗೆ ಶೇ.17 ಹಾಗೂ ಎಸ್‍ಟಿಗೆ ಶೇ.7ರಷ್ಟು ಮೀಸಲಾತಿ ಹೆಚ್ಚಿಸಲು ಶಿಫಾರಸು ಮಾಡಿತ್ತು. ಬಳಿಕ ನ್ಯಾಯಮೂರ್ತಿ ಸುಭಾಷ್ ಅಡಿ ನೇತೃತ್ವದ ಆಯೋಗವೂ 2022ರ ಅಕ್ಟೋಬರ್ 7ರಂದು ಇದೇ ಶಿಫಾರಸನ್ನು ಪುನರುಚ್ಚರಿಸಿತ್ತು. ಈ ಶಿಫಾರಸುಗಳ ಆಧಾರದ ಮೇಲೆ ರಾಜ್ಯ ಸರ್ಕಾರ 2022ರಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಕಾಯ್ದೆ ಜಾರಿಗೊಳಿಸಿತು ಎಂದು ತಿಳಿಸಿದರು.
ಮೀಸಲಾತಿ ಹೆಚ್ಚಳದ ಕಾಯ್ದೆಗೆ ಸಂವಿಧಾನಾತ್ಮಕ ರಕ್ಷಣೆ ಒದಗಿಸಲು ಅದನ್ನು ಸಂವಿಧಾನದ ಒಂಬತ್ತನೇ ಅನುಸೂಚಿಗೆ ಸೇರಿಸುವ ಅಗತ್ಯವಿದೆ. ಈ ಸಂಬಂಧ 2023ರ ಮಾರ್ಚ್ 23ರಂದು ರಾಜ್ಯ ಸರ್ಕಾರ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದರೂ, ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕರೆದು, ಎಲ್ಲ ಪಕ್ಷಗಳ ಸಂಸದರು, ಶಾಸಕರು ಹಾಗೂ ಸಚಿವರನ್ನು ಒಳಗೊಂಡ ನಿಯೋಗದೊಂದಿಗೆ ಪ್ರಧಾನಮಂತ್ರಿಗಳನ್ನು ಭೇಟಿಯಾಗಿ ಕಾಯ್ದೆಯನ್ನು ಒಂಬತ್ತನೇ ಅನುಸೂಚಿಗೆ ಸೇರಿಸಲು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.
ಶೇ.56ರ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‍ನಲ್ಲಿರುವ ತಡೆಯಾಜ್ಞೆ ತೆರವುಗೊಳಿಸಲು ಸಮರ್ಥ ವಕೀಲರನ್ನು ನೇಮಿಸಿ ಕಾನೂನು ಹೋರಾಟ ನಡೆಸಬೇಕು. ಅಗತ್ಯವಿದ್ದರೆ ಸುಪ್ರೀಂ ಕೋರ್ಟ್‍ನಲ್ಲಿಯೂ ಸೂಕ್ತ ಅರ್ಜಿ ಸಲ್ಲಿಸಬೇಕು. ಎಸ್‍ಸಿ, ಎಸ್‍ಟಿ ಹಾಗೂ ಇತರೆ ಹಿಂದುಳಿದ ವರ್ಗಗಳ ಜನಪ್ರತಿನಿಧಿಗಳು ಮತ್ತು ಮುಖಂಡರ ಸಭೆ ಕರೆದು ಈ ಕುರಿತು ಸಮಗ್ರ ಚರ್ಚೆ ನಡೆಸಬೇಕು. ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರದ ಸೌಲಭ್ಯಗಳನ್ನು ಪಡೆಯುವವರ ವಿರುದ್ಧ ಹಾಗೂ ಅಂತಹ ಪ್ರಮಾಣಪತ್ರ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮೀಸಲಾತಿ ಹೆಚ್ಚಳದ ಕುರಿತು ಸರ್ಕಾರದ ಗಮನ ಸೆಳೆಯಲಾಗುತ್ತಿದೆ. ಮುಂದಿನ ಹಂತದಲ್ಲಿ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ಸಂವಿಧಾನದ ಒಂಬತ್ತನೇ ಅನುಸೂಚಿ ಹಾಗೂ ಮೀಸಲಾತಿ ವಿಚಾರವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು. ಭೋವಿ ಸಮಾಜದ ಅರ್ಹರಿಗೆ ಎಸ್‍ಸಿ ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ಅಧಿಕಾರಿಗಳು ಅನಗತ್ಯ ತೊಂದರೆ ನೀಡದಂತೆ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಮೈಸೂರು ಜಿಲ್ಲಾಧ್ಯಕ್ಷ ತಾಯೂರು ಪ್ರಕಾಶ್, ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯ ಕಾರ್ಯಾಧ್ಯಕ್ಷ ಎಂ. ನರಸಿಂಹಯ್ಯ,ಉದ್ಯಮಿ ಹಾಗೂ ಖಜಾಂಚಿ ರಾಜಪ್ಪ, ನಿವೃತ್ತ ಮೇಲ್ವಿಚಾರಕ ಎಂಜಿನಿಯರ್ ಹನುಮಂತರಾಯಪ್ಪ ಹಾಗೂ ದಾವಣಗೆರೆ ನಗರಪಾಲಿಕೆಯ ಮಾಜಿ ಸದಸ್ಯ ಗಣೇಶ್ ಹುಲ್ಮನಿ ಉಪಸ್ಥಿತರಿದ್ದರು.























