
ಸಂಜೆವಾಣಿ ವಾರ್ತೆ:
ಕೊಟ್ಟೂರು: ಸೆಪ್ಟೆಂಬರ್17: ಕೊಟ್ಟೂರು ಪಟ್ಟಣ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಎಂ ಎಸ್ ಕೌಲಾಂಪುರೆ ಹಾಗೂ ಡಿಎಸ್ ಪಿ ಸಚಿನ್ ಎಸ್ ಛಲವಾದಿ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ವಿವಿಧ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿದ ಘಟನೆ ಪಟ್ಟಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ಪಟ್ಟಣ ಪಂಚಾಯತ್ ಕಚೇರಿಗೆ ಆಗಮಿಸಿ, ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಕಡತಗಳು, ಅರ್ಜಿ ವಿಲೇವಾರಿ ದಾಖಲೆಗಳು, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾರ್ವಜನಿಕರಿಂದ ಬಂದಿರುವ ಮನವಿಗಳ ಕುರಿತು ಪರಿಶೀಲನೆ ನಡೆಸಿದರು.
ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ಮಾಹಿತಿ ಹರಡುತ್ತಿದ್ದಂತೆ ಸಾರ್ವಜನಿಕರು ಹಾಗೂ ಸ್ಥಳೀಯರಲ್ಲಿ ಕುತೂಹಲ ಮೂಡಿತು ಕಚೇರಿಯಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಅಗತ್ಯ ಮಾಹಿತಿ ಪಡೆದುಕೊಂಡ ಅಧಿಕಾರಿಗಳು ಕೆಲವು ದಾಖಲೆಗಳನ್ನು ಪರಿಶೀಲಿಸಿ, ದಾಖಲೆಗಳ ನಿರ್ವಹಣೆ ಹಾಗೂ ಸಾರ್ವಜನಿಕ ಸೇವೆಗಳ ವಿಲೇವಾರಿ ಕುರಿತು ಮಾಹಿತಿ ಸಂಗ್ರಹಿಸಿದರು.
ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳು, ವಿವಿಧ ಅನುಮತಿಗಳು, ತೆರಿಗೆ ಸಂಬಂಧಿತ ದಾಖಲೆಗಳು, ಕಾಮಗಾರಿಗಳಿಗೆ ಸಂಬಂಧಿಸಿದ ಕಡತಗಳು ಸೇರಿದಂತೆ ಹಲವು ವಿಷಯಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಅಧಿಕಾರಿಗಳು ಕೇಳಿದ ದಾಖಲೆಗಳು ಮತ್ತು ಮಾಹಿತಿಯನ್ನು ಸಿಬ್ಬಂದಿ ಒದಗಿಸಿದರು ಈ ಸಂಧರ್ಭದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಗಳಾದ ರಾಜೇಶ್ ಎಸ್ ಲಮಾಣಿ, ಅಂಬರೀಶ್ ಹುಬ್ಬಳ್ಳಿ, ಸುರೇಶ ಭಾವಿಮನಿ ಸೇರಿದಂತೆ ಹತ್ತಕ್ಕೂ ಹೆಚ್ಚು ಜನ ಸಿಬ್ಬಂದಿಗಳು ಇದ್ದರು.



























