Home ಜಿಲ್ಲೆ ಮಂಗಳೂರು ಕೊಲ್ಲೂರು ದೇವಸ್ಥಾನದ ಬಳಿ ಅವಘಡ – ಲೈಟ್ ಸೆಟ್ ಬಿದ್ದು ಮೂವರಿಗೆ ಗಾಯ

ಕೊಲ್ಲೂರು ದೇವಸ್ಥಾನದ ಬಳಿ ಅವಘಡ – ಲೈಟ್ ಸೆಟ್ ಬಿದ್ದು ಮೂವರಿಗೆ ಗಾಯ

ಉಡುಪಿ-ನವರಾತ್ರಿ ಸಂಭ್ರಮದ ನಡುವೆಯೇ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ಅವಘಡ ಸಂಭವಿಸಿದೆ. ದೇವಸ್ಥಾನದ ಎದುರಿನ ವಾಣಿಜ್ಯ ಸಂಕೀರ್ಣದ ಮೇಲೆ ಅಳವಡಿಸಲಾಗಿದ್ದ ಬೃಹತ್ ಅಲಂಕಾರಿಕ ಲೈಟ್ ಸೆಟ್ ಗಾಳಿಯ ರಭಸಕ್ಕೆ ಉರುಳಿ ಭಕ್ತರ ಮೇಲೆ ಬಿದ್ದಿದೆ. ಘಟನೆಯಲ್ಲಿ ವಯೋವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮತ್ತಿಬ್ಬರು ಭಕ್ತರಿಗೂ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ.
ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದ ಮುಂಭಾಗದ ವಾಣಿಜ್ಯ ಸಂಕೀರ್ಣದ ಮೇಲ್ಭಾಗದಲ್ಲಿ ಬೃಹತ್ ಗಾತ್ರದ ಅಲಂಕಾರಿಕ ಲೈಟ್ ಸೆಟ್ಗಳನ್ನು ಅಳವಡಿಸಲಾಗಿತ್ತು. ಬುಧವಾರ ಏಕಾಏಕಿ ಬಲವಾದ ಗಾಳಿ ಬೀಸಿದ ಪರಿಣಾಮ ಲೈಟ್ ಸೆಟ್ ಕಟ್ಟಡದ ಮೇಲಿನಿಂದ ಕೆಳಕ್ಕೆ ಉರುಳಿದೆ. ಬಿಸಿಲಿನಿಂದ ರಕ್ಷಣೆ ಪಡೆಯಲು ಕಟ್ಟಡದ ನೆರಳಿನಲ್ಲಿ ನಿಂತಿದ್ದ ಭಕ್ತರ ಮೇಲೆ ಲೈಟ್ ಸೆಟ್ ಬಿದ್ದಿದೆ. ಈ ವೇಳೆ ಕೆಲವರು ತಕ್ಷಣವೇ ಅಲ್ಲಿಂದ ಓಡಿ ಹೋಗಿ ಅಪಾಯದಿಂದ ಪಾರಾಗಿದ್ದಾರೆ. ಆದರೆ, ಮೂವರು ಭಕ್ತರ ಮೇಲೆ ಲೈಟ್ ಸೆಟ್ ಬಿದ್ದ ಪರಿಣಾಮ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಅವಘಡದಲ್ಲಿ ವಯೋವೃದ್ಧ ಭಕ್ತರೊಬ್ಬರ ತಲೆಯ ಮೇಲೆ ಲೈಟ್ ಸೆಟ್ ಬಿದ್ದಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡು ಒದ್ದಾಡುತ್ತಿದ್ದ ವೃದ್ಧರ ನೆರವಿಗೆ ತಕ್ಷಣವೇ ಸಾರ್ವಜನಿಕರು ಧಾವಿಸಿದ್ದಾರೆ. ಬಳಿಕ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಕೊಲ್ಲೂರು ಕ್ಷೇತ್ರಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿರುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಒಂಬತ್ತು ದಿನಗಳ ಕಾಲ ದೇವಿಗೆ ವಿಶೇಷ ಪೂಜೆ, ಅಲಂಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಹೀಗಾಗಿ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಅಳವಡಿಸಲಾಗಿರುವ ತಾತ್ಕಾಲಿಕ ಲೈಟ್ಗಳು, ಬ್ಯಾನರ್ಗಳು ಹಾಗೂ ಇತರ ಅಲಂಕಾರಿಕ ವ್ಯವಸ್ಥೆಗಳು ಸುರಕ್ಷಿತವಾಗಿರುವುದನ್ನು ಸಂಬAಧಪಟ್ಟವರು ಖಚಿತಪಡಿಸಿಕೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.