
ಸಂಜೆವಾಣಿ ನ್ಯೂಸ್
ಮೈಸೂರು: ಫೆ.28:- ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ತಮ್ಮ ವ್ಯಾಪ್ತಿಯ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಎಐಡಿವೈಒ(ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್) ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಚಿಕ್ಕಗಡಿಯಾರದ ಎದುರು ಜಮಾವಣೆಗೊಂಡ ನೂರಾರು ಮಂದಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ಮಾಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.
ನಿರಂತರ ಹೋರಾಟದ ಫಲವಾಗಿ ಮುಖ್ಯಮಂತ್ರಿಗಳು ಕಳೆದ ಡಿಸೆಂಬರ್‍ನಲ್ಲಿ 56,432 ಹುದ್ದೆಗಳ ಭರ್ತಿಗೆ ಹಾಗೂ ಬೆಳಗಾವಿ ಅಧಿವೇಶನದಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಘೋಷಿಸಿದ್ದರು. ಆದರೆ, ಘೋಷಣೆಯಾಗಿ ಹಲವು ತಿಂಗಳು ಕಳೆದರೂ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಈಗ ಮತ್ತೆ ಸಂಪುಟ ಸಭೆಯಲ್ಲಿ 56,000 ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ಇದು ಕೇವಲ ಬಾಯಿ ಮಾತಾಗದೇ ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸಬೇಕು. ಜೊತೆಗೆ ಖಾಲಿ ಇರುವ ಎಲ್ಲಾ 2,84,881 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಭ್ರಷ್ಟಾಚಾರ ನಿಲ್ಲಿಸಿ: ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡಬೇಕು. ಭ್ರಷ್ಟಾಚಾರ ಇರಬಾರದು. ನೇಮಕಾತಿಯ ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಬೇಕು. ಅರ್ಜಿ ಶುಲ್ಕ ಕಡಿತ ಮಾಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಉದ್ಯೋಗಗಳನ್ನು ನಾಶ ಮಾಡುವ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ಕೈ ಬಿಡಬೇಕು ಎಂದು ಆಗ್ರಹಿಸಿದರು.




























