ಗಣೇಶ, ಈದ್ ಮಿಲಾದ್ ಹಬ್ಬಗಳನ್ನು ಸ್ನೇಹ ಭಾವನೆಯಿಂದ ಆಚರಿಸಿ.


ಸಂಜೆವಾಣಿ ವಾರ್ತೆ ವಾರ್ತೆ
ಹೊಸಪೇಟೆ (ವಿಜಯನಗರ)ಆ22:
ಗೌರಿ ಗಣೇಶ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಪರಸ್ಪರ ಸ್ನೇಹ ಭಾವನೆ ಹಾಗೂ ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ಜಿಲ್ಲಾದಿಕಾರಿ ಎಂ.ಎಸ್.ದಿವಾಕರ್ ಅವರ ಹೇಳಿದರು.
ನಗರದ ಜಿಲ್ಲಾ ಒಳಕ್ರೀಡಾಂಗಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು, ಶಾಂತಿ ಸೌಹಾರ್ದತೆಗೆ ಹೆಸರಾಗಿರುವ ವಿಜಯನಗರ ಜಿಲ್ಲೆಗೆ ಕಳಂಕ ಬಾರದ ರೀತಿಯಲ್ಲಿ ಎಲ್ಲ ಧರ್ಮೀಯರೂ ಸೇರಿ ಕಾನೂನು ಸುವ್ಯವಸ್ಥೆಗೆ ಹಾಗೂ ಕೋಮು ಭಾವನೆಗಳಿಗೆ ಧಕ್ಕೆ ಬಾರದ ರೀತಿ ಶಾಂತಿ ಸೌಹಾರ್ದತೆಯಿಂದ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಆಚರಿಸಬೇಕು.
ಹಬ್ಬ ಆಚರಣೆ ವೇಳೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಆಸ್ಪತ್ರೆ, ಶಾಲೆ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಅತ್ಯಂತ ಜವಾಬ್ದಾರಿಯುತವಾಗಿ ವರ್ತಿಸಬೇಕು. ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇತರೆ ಪರವಾನಿಗೆಗಳನ್ನು ಏಕಗವಾಕ್ಷಿ ಪದ್ಧತಿಯಡಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶುಭಾಶಯ ಕೋರುವ ಬ್ಯಾನರ್, ಬಂಟಿಂಗ್‌ಗಳನ್ನು ಆಳವಡಿಸಲು ಆಯಾ ಸ್ಥಳೀಯ ಪ್ರಾಧಿಕಾರದಿಂದ ತಪ್ಪದೇ ಅನುಮತಿ ಪಡೆದುಕೊಳ್ಳಬೇಕು. ಪೆಂಡಾಲುಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಪರವಾನಿಗೆ ಪಡೆಯಬೇಕು. ಗಣೇಶ ಮೂರ್ತಿಗಳ ವಿಸರ್ಜನೆ, ಮೆರವಣಿಗೆ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗುವುದು. ರಸ್ತೆಯಲ್ಲಿ ಪೆಂಡಾಲ್ ಹಾಕಿ ಸಾರ್ವಜನಿಕರಿಗೆ ಹಾಗೂ ಅಂಬ್ಯುಲೆನ್ಸ್, ಅಗ್ನಿಶಾಮಕ ವಾಹನಗಳ ಓಡಾಟಕ್ಕೆ ತೊಂದರೆ ಮಾಡಲು ಅವಕಾಶವಿರುವುದಿಲ್ಲ. ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಪರಿಸರ ಸ್ನೇಹಿ ಹಾಗೂ ಮಣ್ಣಿನಿಂದ ಮಾಡಿದ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು. ಜಿಲ್ಲೆಯಲ್ಲಿ ಸಾರ್ವಜನಿಕರು ಇದುವರೆಗೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗೆ ಸಹಕಾರ ನೀಡಿದ್ದಾರೆ. ಈ ಬಾರಿಯೂ ಸಹ ಸಹಕಾರ ನೀಡಿ ಎರಡೂ ಹಬ್ಬಗಳು ಶಾಂತಿ ಸೌಹಾರ್ದತೆಯಿಂದ ಆಚರಿಸೋಣ ಎಂದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಮಾತನಾಡಿ, ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಭಾವೈಕ್ಯತೆಯಿಂದ ಆಚರಿಸಬೇಕು. ಗಣೇಶ ಪ್ರತಿಷ್ಠಾಪನೆಯ ಪೆಂಡಾಲ್‌ಗಳಲ್ಲಿ ಅಗ್ನಿನಂದಕಗಳನ್ನು ಬಳಕೆ ಮಾಡಬೇಕು. ಪೆಂಡಾಲ್‌ಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು. ಸಾರ್ವಜನಿಕ ಗಣೇಶ ಪ್ರತಿಷ್ಟಾಪನೆಯಲ್ಲಿ ಕಡ್ಡಾಯವಾಗಿ ಸ್ವಯಂಸೇವಕರನ್ನು ನೇಮಿಸಬೇಕು. ಪೆಂಡಾಲ್‌ನಲ್ಲಿ ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನಕ್ಕೆ ಪ್ರತ್ಯೇಕ ದ್ವಾರ ಮಾರ್ಗ ನಿರ್ಮಿಸಬೇಕು. ಗಣೇಶ ಪ್ರತಿಷ್ಠಾಪನ ಮಂಡಳಿಯವರು ಮೂರ್ತಿಗಳ ವಿಸರ್ಜನೆ, ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಕಡ್ಡಾಯವಾಗಿ ಪರವಾನಿಗೆಯನ್ನು ಪಡೆದುಕೊಳ್ಳಬೇಕು. ಪರವಾನಿಗೆ ಪಡೆದ ಮಾರ್ಗವನ್ನು ಯಾವುದೇ ಕಾರಣಕ್ಕೂ ಬದಲಾವಣೆಯನ್ನು ಮಾಡುವಂತಿಲ್ಲ. ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಎಲ್ಲರೂ ಶಾಂತಿ, ಸಂಯಮದಿಂದ ವರ್ತಿಸಿ, ಕಾನೂನು ಸುವ್ಯವಸ್ಥೆ ಉಲ್ಲಂಘನೆ ಆಗದಂತೆ ಕ್ರಮ ಕೈಗೊಳ್ಳಬೇಕು. ಈದ್ ಮಿಲಾದ್ ಹಬ್ಬವನ್ನು ಎಲ್ಲರೂ ಸೌಹಾರ್ದತೆಯಿಂದ ಆಚರಿಸಬೇಕು ಎಂದರು.
ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿವೈಎಸ್‌ಪಿಗಳಾದ ಟಿ.ಮಂಜುನಾಥ, ವೆಂಕಟಪ್ಪ ನಾಯಕ, ಸೇರಿದಂತೆ ಎಲ್ಲಾ ವೃತ್ತ ನೀರಿಕ್ಷಕರು, ವಿವಿಧ ತಾಲೂಕಿನ ಗಣೇಶ ಪ್ರತಿಷ್ಠಾಪನೆ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.