Home ಜಿಲ್ಲೆ ಮಂಗಳೂರು ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಯೋಜನೆ ತ್ವರಿತ ಅನುಷ್ಠಾನಗೊಳಿಸಿ: ಫೌಜಿಯಾ ತರನ್ನುಮ್

ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಯೋಜನೆ ತ್ವರಿತ ಅನುಷ್ಠಾನಗೊಳಿಸಿ: ಫೌಜಿಯಾ ತರನ್ನುಮ್

ಮಂಗಳೂರು-ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗೊಳಿಸಲು ಮತ್ತು ಗುಣಮಟ್ಟ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್. ಬಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ ನಡೆದ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯೋಜನೆಗೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಕಾಮಗಾರಿಗೆ ಬಳಕೆ ಮಾಡಿ, ಬಾಕಿ ಉಳಿದ ಯೋಜನೆಯ ಎಲ್ಲಾ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಶೀಘ್ರವಾಗಿ ಪೂರ್ಣಗೊಳಿಸಬೇಕು. ಆಗಾಗ್ಗೆ ಕಾಮಗಾರಿಗಳನ್ನು ಪರಿಶೀಲಿಸುತ್ತಿರಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಯೋಜನೆಗಳ ಕಾಮಗಾರಿಗಳು ಕಳಪೆಯಾಗದಂತೆ ಎಚ್ಚರ ವಹಿಸಿ ಸಮರ್ಪಕ ನಿರ್ವಹಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ಲಭ್ಯತೆ, ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆಗಳಲ್ಲಿ ಸೂಕ್ತ ಗಮನ ಹರಿಸಬೇಕು. ಜನರಿಗೆ ಶುದ್ಧ ನೀರನ್ನು ಪೂರೈಸಲು ಆದ್ಯತೆಯ ಮೇಲೆ ಕಾರ್ಯ ನಿರ್ವಹಿಸಬೇಕು. ಈ ಯೋಜನೆಗಳಲ್ಲಿ ಯಾವುದೇ ವಿಳಂಬ ಮಾಡಬಾರದು. ಜನರಿಗೆ ಕಲುಷಿತ ನೀರು ಪೂರೈಕೆಯಾಗದಂತೆ ನಿಯಮಿತವಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಬೇಕು. ಯಾವುದೇ ನಿರ್ಲಕ್ಷ್ಯ ತೋರದೆ ಜನರಿಗೆ ಶುದ್ಧ ಮತ್ತು ಸುರಕ್ಷಿತ ನೀರನ್ನು ಪೂರೈಕೆ ಮಾಡಲು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗಮನ ಹರಿಸುವಂತೆ ಅವರು ನಿರ್ದೇಶಿಸಿದರು.
ಕಡಬ ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಜಲ ಶುದ್ಧೀಕರಣ ಘಟಕ, ಮಲತ್ಯಾಜ್ಯ ಸಂಸ್ಕರಣಾ ಘಟಕ, ಏಕಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ, ಜಾಕ್‌ವೆಲ್ ಕಾಮಗಾರಿ, ಮೆಟೀರಿಯಲ್ ರಿಕವರಿ ಫೆಸಿಲಿಟಿಗೆ ಸಂಬಂಧಿಸಿದಂತೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ ಮಾತನಾಡಿ, ಈ ಯೋಜನೆಯ ಅನು??ಠನದಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಮುಂದಿನ ದಿನಗಳಲ್ಲಿ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇರುವುದರಿಂದ, ನಿರಂತರ ನೀರಿನ ಲಭ್ಯತೆಗೆ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಶುದ್ಧ ಕುಡಿಯುವ ನೀರಿನ ಪೂರೈಕೆ ಹಾಗೂ ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆಗೆ ಒತ್ತು ನೀಡಬೇಕು ಎಂದು ಹೇಳಿದರು.
ಇದಕ್ಕೂ ಮೊದಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್. ಬಿ ಅವರು ವಿವಿಧ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜೆ.ಜೆ.ಎಂ.ನ ಗುತ್ತಿಗೆದಾರರು, ತಾಲ್ಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.