ದೆಹಲಿ, ಕರ್ನಾಟಕ ಸೇರಿ ಹಲವೆಡೆ ಮಳೆ

ವದೆಹಲಿ, ಜೂ.23- ಇಂದಿನಿಂದ ಜೂನ್ 28ರ ವರೆಗೆ ರಾಷ್ಟ್ರದ ರಾಜಧಾನಿ ದೆಹಲಿ ಸೇರಿದಂತೆ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.


ದೇಶದ ವಿವಿಧ ಭಾಗಗಳಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು ಧಾರಾಕಾರ ಮಳೆಯಾಗುತ್ತಿದೆ. ಕಳೆದ 24 ಗಂಟೆಯ ಅವಧಿಯಲ್ಲಿ ಕರ್ನಾಟಕವೂ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.


ರಣಭೀಕರ ಮಳೆಯಿಂದಾಗಿ ಗುಜರಾತ್ ಮತ್ತು ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಇನ್ನು ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಕಳೆದ ಒಂದು ವಾರದಿಂದಲೂ ಧಾರಾಕಾರ ಮಳೆಯಾಗುತ್ತಿದ್ದು ಇನ್ನೇರಡು ದಿನ ಅಂದರೆ ಜೂನ್ 25ರ ವರೆಗೆ ಧಾರಾಕಾರ ಮಳೆ ಮುಂದುವರಿಯಲಿದೆ.


ಇನ್ನು ಭಾರತೀಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಹರಿಯಾಣ, ಪಂಜಾಬ್, ಚಂಡೀಗಢ, ದೆಹಲಿ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ.


ಅಲ್ಲದೇ ಗುಜರಾತ್, ಜಾರ್ಖಂಡ್, ಛತ್ತೀಸ್‍ಗಢ, ಒಡಿಶಾ, ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ಭಾಗದಲ್ಲೂ ಮಳೆಯಬ್ಬರ ಜೋರಾಗಿದೆ. ಇದರೊಂದಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಭಾಗದಲ್ಲೂ ಮಳೆಯಾಗಲಿದೆ. ಈ ಸಂದರ್ಭದಲ್ಲಿ ಗಾಳಿಯ ವೇಗವು 40ರಿಂದ 50 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರದಲ್ಲಿ ಪ್ರವಾಹ ಪರಿಸ್ಥಿತಿ: ಇನ್ನು ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮುಂದಿನ ಮೂರು ದಿನಗಳ ಅವಧಿಗೆ ಮಹಾರಾಷ್ಟ್ರದ ವಿವಿಧ ಭಾಗದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ನೆರೆಯ ಮಹಾರಾಷ್ಟ್ರದಲ್ಲಿ ಮಳೆ ಆಗುತ್ತಿರುವುದು ಕರ್ನಾಟಕದ ಮೇಲೂ ಪ್ರಭಾವ ಬೀರುವ ಸಾಧ್ಯತೆ ಇದೆ.


ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾದರೆ ಜಲಾಶಯಗಳು ಭರ್ತಿ ಆಗಲಿವೆ. ನೀರು ಬಿಡುವ ಪ್ರಮಾಣವೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ಮಹಾರಾಷ್ಟ್ರ ಸರ್ಕಾರವು ಇನ್ನಷ್ಟೇ ಖಚಿತಪಡಿಸಬೇಕಿದೆ.


ಈಶಾನ್ಯ ರಾಜ್ಯಗಳಲ್ಲಿ ಮಳೆ ಅಬ್ಬರ: ಇನ್ನು ಭಾರತದ ಈಶಾನ್ಯ ರಾಜ್ಯಗಳಲ್ಲೂ ಮಳೆಯಬ್ಬರ ಮುಂದುವರಿದಿದೆ. ಪ್ರತಿ ಬಾರಿಯೂ ಪ್ರವಾಹ ಪರಿಸ್ಥಿತಿ ಎದುರಾಗುವ ಅಸ್ಸಾಂನಲ್ಲಿ ಈ ಬಾರಿಯೂ ಮಳೆಯಬ್ಬರ ಜೋರಾಗಿದೆ. ಮುಂದಿನ ಒಂದು ವಾರಗಳ ಅವಧಿಗೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ಮಿಂಚು – ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.