
ಮಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಪೊಲೀಸ್ ಇಲಾಖೆ, ಮಂಗಳೂರು ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ ೧೨ ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ದ ಪ್ರಯುಕ್ತ ಬೆಳಿಗ್ಗೆ ೯:೩೦ ಗಂಟೆಗೆ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಪುರಭವನದವರೆಗೆ ಬಾಲಕಾರ್ಮಿಕ ಪದ್ಧತಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಾಥಾ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ಉದ್ಘಾಟಿಸಲಿದ್ದಾರೆ.
ಪುರಭವನ ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ ಗಂಟೆಯಿಂದ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಜೈಬುನ್ನೀಸಾ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಜೂನ್ ೧೩ ರಿಂದ ಜೂನ್ ೩೦ ರವರೆಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ಪುನರ್ವಸತಿಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರಿಂದ ವಿವಿಧ ಸಂಸ್ಥೆಗಳಿಗೆ ಅನಿರೀಕ್ಷಿತ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಬಾಲಕಾರ್ಮಿಕರು ಹಾಗೂ ಕಿಶೋರ ಕಾರ್ಮಿಕರು ದುಡಿಯುತ್ತಿರುವುದು ಕಂಡು ಬಂದಲ್ಲಿ ಚೈಲ್ಡ್ ಹೆಲ್ಪ್‌ಲೈನ್ ಸಂಖ್ಯೆ ೧೦೯೮ ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.