Home ಜಿಲ್ಲೆ ನಿಡುಗುರ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ನಿಡುಗುರ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಸಂಜೆವಾಣಿ ವಾರ್ತೆ

ಸಂಡೂರು :ಜೂ:29  ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಿಲಾನ್ ಸಾಬ್ ಅವರ ಮೊಮ್ಮಗಳಿಗೆ ಎರಡು ಹನಿ ಪೆಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಲಾಯಿತು.ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಸಂಡೂರು ತಹಸಿಲ್ದಾರ್ ಅನಿಲ್ ಕುಮಾರ್  ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗಿತ್ತು,ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪುರಸಭೆ, ಜೆಸ್ಕಾಂ, ತಾಲೂಕು ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಡೂರು ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ವಿಶ್ವ ಆರೋಗ್ಯ ಸಂಸ್ಥೆ  ಲಸಿಕಾ ಕಾರ್ಯಕ್ರಮದ ಮೇಲ್ವಿಚಾರಕರು ಭಾಗವಹಿಸಿದ್ದರು.

ತಾಲೂಕು ಆರೋಗ್ಯಾಧಿಕಾರಿ ಡಾ. ವೀರೇಂದ್ರ ಕುಮಾರ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ದೇಶ, ಮಹತ್ವ ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದ ಅಗತ್ಯತೆಯನ್ನು ವಿವರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಪ್ರತಿಯೊಂದು ಇಲಾಖೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.ನಂತರ ಮಾತನಾಡಿದ ತಹಸಿಲ್ದಾರ್ ಅನಿಲ್ ಕುಮಾರ್ ಕೆ ಅವರು, ಜೂನ್ 28ರಿಂದ ಜುಲೈ 1ರವರೆಗೆ ನಾಲ್ಕು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಆರೋಗ್ಯ ಇಲಾಖೆಯೊಂದಿಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ತಮ್ಮ ತಮ್ಮ ಇಲಾಖೆಗಳ ಜವಾಬ್ದಾರಿಗಳನ್ನು ಚಾಚು ತಪ್ಪದೆ ನಿರ್ವಹಿಸಿ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಆರೋಗ್ಯ ಇಲಾಖೆ ವತಿಯಿಂದ ಸಂಡೂರು ತಾಲೂಕಿನ ಗ್ರಾಮೀಣ ಹಾಗೂ ನಗರ ಪ್ರದೇಶಗಳನ್ನು ಒಳಗೊಂಡಂತೆ ಒಟ್ಟು 203 ಪಲ್ಸ್ ಪೋಲಿಯೋ ಬೂತ್‍ಗಳನ್ನು ಸ್ಥಾಪಿಸಲಾಗಿದೆ. ಜೊತೆಗೆ ತುರ್ತು ಕೆಲಸ ಹಾಗೂ ಪ್ರಯಾಣದ ನಿಮಿತ್ತ ಊರುಗಳಿಗೆ ತೆರಳುವ ಕುಟುಂಬಗಳ ಮಕ್ಕಳ ಅನುಕೂಲಕ್ಕಾಗಿ ಸಂಡೂರು ಬಸ್ ನಿಲ್ದಾಣ, ತೋರಣಗಲ್ಲು ರೈಲು ನಿಲ್ದಾಣ ಹಾಗೂ ಚೋರ್ನೂರು ಬಸ್ ನಿಲ್ದಾಣಗಳಲ್ಲಿ ವಿಶೇಷ ಪಲ್ಸ್ ಪೋಲಿಯೋ ಬೂತ್‍ಗಳನ್ನು ತೆರೆಯಲಾಗಿದೆ.

ಈ ಅಭಿಯಾನದಡಿ ಸಂಡೂರು ತಾಲೂಕಿನಾದ್ಯಂತ 35,818 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ತಮ್ಮ ಮನೆಗಳಲ್ಲಿ ಹುಟ್ಟಿದ ಮಗುವಿನಿಂದ ಐದು ವರ್ಷದೊಳಗಿನ ಎಲ್ಲ ಮಕ್ಕಳನ್ನು ಸಮೀಪದ ಪಲ್ಸ್ ಪೋಲಿಯೋ ಕೇಂದ್ರಗಳಿಗೆ ಕರೆತಂದು ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದರು.ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದ ಪೂರ್ವಸಿದ್ಧತೆಗಳು, ಸಮನ್ವಯ ಕ್ರಮಗಳು ಹಾಗೂ ಯಶಸ್ವಿ ಅನುಷ್ಠಾನಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿ, ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದರು.