
ಉಪ್ಪಿನಂಗಡಿ: ಹಾಸನ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಐಟಿಐ ಕಾಲೇಜು ಮುಂಭಾಗ ನಿಲ್ಲಿಸಲಾಗಿದ್ದ ಟ್ಯಾಂಕರ್ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಅಕ್ಟೋಬರ್ ೨೨ರ ತಡರಾತ್ರಿ ಸಂಭವಿಸಿದೆ.
ಅಕ್ಟೋಬರ್ ೨೨ರಂದು ತಡರಾತ್ರಿ ವೇಳೆ ಹಾಸನ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು, ನೆಲ್ಯಾಡಿ ಐಟಿಐ ಕಾಲೇಜಿನ ಮುಂಭಾಗದ ಏಕಮುಖ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್ ಲಾರಿಯ ಹಿಂಬದಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಅಪಘಾತದ ಶಬ್ದ ಕೇಳಿ ಸ್ಥಳೀಯ ನಿವಾಸಿ ವಿ. ಜೆ. ಜೋಸೆಫ್ (೫೫) ಹಾಗೂ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಒಳಗೆ ಸಿಲುಕಿದ್ದ ಚಾಲಕ ಹಾಗೂ ಸಹಪ್ರಯಾಣಿಕ ತೀವ್ರವಾಗಿ ಗಾಯಗೊಂಡಿದ್ದರು.
ಸ್ಥಳೀಯರು ತಕ್ಷಣವೇ ಇಬ್ಬರನ್ನೂ ಚಿಕಿತ್ಸೆಗಾಗಿ ನೆಲ್ಯಾಡಿಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಕಾರಿನಲ್ಲಿದ್ದ ಸಹಪ್ರಯಾಣಿಕ ಈಗಾಗಲೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಕಾರು ಚಾಲಕನನ್ನು ಒಳರೋಗಿಯಾಗಿ ದಾಖಲಿಸಿಕೊಂಡು ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ವಿ. ಜೆ. ಜೋಸೆಫ್ ಅವರು ನೀಡಿದ ದೂರಿನನ್ವಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.






















