
ಸಂಜೆವಾಣಿ ನ್ಯೂಸ್
ಮೈಸೂರು, ಅ.31:- ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ ರೈಲ್ವೆ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರಿಗಾಗಿ ಅಂತರ ವಿಭಾಗೀಯ ಸಂಗೀತ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ವಿವಿಧ ವಿಭಾಗಗಳ ರೈಲ್ವೆ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 72 ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿ ತಮ್ಮ ಸಂಗೀತ ಪ್ರತಿಭೆಯನ್ನು ಪ್ರದರ್ಶಿಸಿದರು.
ಸ್ಪರ್ಧೆಯನ್ನು ಒಟ್ಟು ಏಳು ವಿಭಾಗಗಳಲ್ಲಿ ಆಯೋಜಿಸಲಾಗಿತ್ತು. ಶಾಸ್ತ್ರೀಯ ಏಕವ್ಯಕ್ತಿ ಗಾಯನ, ಲಘು ಸಂಗೀತ ಏಕವ್ಯಕ್ತಿ ಗಾಯನ, ಚಲನಚಿತ್ರ ಗೀತೆಗಳ ಏಕವ್ಯಕ್ತಿ ಗಾಯನ, ಶಾಸ್ತ್ರೀಯ ವಾದ್ಯ ಸಂಗೀತ, ಲಘು ವಾದ್ಯ ಸಂಗೀತ, ಸಮಕಾಲೀನ ವಾದ್ಯ ಸಂಗೀತ ಮತ್ತು ಸಮೂಹ ಗಾಯನ ವಿಭಾಗಗಳಲ್ಲಿ ಸ್ಪರ್ಧಿಗಳು ತಮ್ಮ ಕೌಶಲ್ಯ ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಅವರು ಸ್ಪರ್ಧೆಯ ತೀರ್ಪುಗಾರರಾದ ವಿದ್ವಾನ್ ಮಹಾಲಿಂಗ ಎಂ. ಮತ್ತು ವಿದ್ವಾನ್ ಭವತಾರಿಣಿ ಅವರನ್ನು ಸನ್ಮಾನಿಸಿದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿಆರ್ಎಂ ಮುದಿತ್ ಮಿತ್ತಲ್, ರೈಲ್ವೆ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ಉತ್ಸಾಹದಿಂದ ಭಾಗವಹಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸಿಬ್ಬಂದಿಯಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಲು, ಅವರ ಸೃಜನಶೀಲತೆಯನ್ನು ಉತ್ತೇಜಿಸಲು ಮತ್ತು ರೈಲ್ವೆ ಸಿಬ್ಬಂದಿ ಹಾಗೂ ಕುಟುಂಬಗಳ ನಡುವೆ ಉತ್ತಮ ಬಾಂಧವ್ಯ ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ವಿವಿಧ ವಿಭಾಗಗಳ ಅಧಿಕಾರಿಗಳು, ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ ಸದಸ್ಯರು, ರೈಲ್ವೆ ಸಿಬ್ಬಂದಿ ಮತ್ತು ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.





















