ಉಡುಪಿ- ನ್ಯಾಯಾಲಯಗಳಿಗೆ ಪದೇ ಪದೇ ಬರುತ್ತಿರುವ ನಕಲಿ ಇ-ಮೇಲ್ ಬೆದರಿಕೆಗಳ ಹಿನ್ನೆಲೆಯಲ್ಲಿ ನ್ಯಾಯಾಲಯಗಳಲ್ಲಿ ಭದ್ರತೆಯನ್ನು ಮತ್ತಷ್ಟು ಬಲಪಡಿಸಲು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್ಪಿ) ಹರಿರಾಂ ಶಂಕರ್ ತಿಳಿಸಿದ್ದಾರೆ.
ಪ್ರತಿದಿನ ನ್ಯಾಯಾಲಯದ ಕಲಾಪ ಆರಂಭಕ್ಕೂ ಮುನ್ನ ನ್ಯಾಯಾಲಯದ ಆವರಣ ಹಾಗೂ ಕಟ್ಟಡವನ್ನು ಸಂಪೂರ್ಣವಾಗಿ ಪರಿಶೀಲಿಸಿ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ಸಾಮಗ್ರಿಗಳಿರುವುದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಇದರಿಂದ ಮುಂದೆಯೂ ಇಂತಹ ನಕಲಿ ಇ-ಮೇಲ್ ಬೆದರಿಕೆಗಳು ಬಂದರೂ ನ್ಯಾಯಾಲಯದ ಕಲಾಪಗಳು ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ಅನಗತ್ಯ ಅಡಚಣೆ ಉಂಟಾಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (Pಆಎ) ಅವರೊಂದಿಗೆ ನಡೆದ ಚರ್ಚೆಯಂತೆ, ಲಭ್ಯವಿರುವ ಸಂಪನ್ಮೂಲಗಳು ಮತ್ತು ಸಿಬ್ಬಂದಿಯ ಲಭ್ಯತೆಯನ್ನು ಆಧರಿಸಿ ಅಗತ್ಯವಿರುವ ನ್ಯಾಯಾಲಯಗಳಲ್ಲಿ ತಾತ್ಕಾಲಿಕವಾಗಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವುದು ಹಾಗೂ ಡೋರ್ ಫ್ರೇಮ್ ಮೆಟಲ್ ಡಿಟೆಕ್ಟರ್ಗಳನ್ನು ಅಳವಡಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.
ನಕಲಿ ಬೆದರಿಕೆ ಇ-ಮೇಲ್ಗಳ ಮೂಲವನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಉಡುಪಿ ಪೊಲೀಸರು ಇತರ ಜಿಲ್ಲೆಗಳು, ವಿವಿಧ ರಾಜ್ಯಗಳ ಪೊಲೀಸ್ ಇಲಾಖೆಗಳು ಹಾಗೂ ಕೇಂದ್ರ ತನಿಖಾ ಸಂಸ್ಥೆಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ತನಿಖೆ ಮುಂದುವರಿಸಿದ್ದಾರೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.


































