Home ಜಿಲ್ಲೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಸಭೆ ನಗರದ ಸಮಗ್ರ ಅಭಿವೃದ್ಧಿಗೆ ವೇಗ ನೀಡಲು ಶಾಸಕ ಭರತ್ ರೆಡ್ಡಿ...

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಸಭೆ ನಗರದ ಸಮಗ್ರ ಅಭಿವೃದ್ಧಿಗೆ ವೇಗ ನೀಡಲು ಶಾಸಕ ಭರತ್ ರೆಡ್ಡಿ ಸೂಚನೆ

ಸಂಜೆವಾಣಿ ವಾರ್ತೆ

ಬಳ್ಳಾರಿ, ಮೇ 27: ನಗರದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಇನ್ನಷ್ಟು ವೇಗ ನೀಡಬೇಕು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು ಎಂದು ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಮಾಹಿತಿ ಪಡೆದು ಅಧಿಕಾರಿಗಳೊಂದಿಗೆ ಚರ್ಚಿಸಿದರು. ರಸ್ತೆ ಅಭಿವೃದ್ಧಿ, ಒಳಚರಂಡಿ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಸಾರ್ವಜನಿಕ ಉದ್ಯಾನಗಳು ಹಾಗೂ ನಾಗರಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಕುರಿತು ವಿಶೇಷವಾಗಿ ಪರಿಶೀಲನೆ ನಡೆಸಿದರು.

ನಗರದ ವೇಗವಾಗಿ ವಿಸ್ತರಿಸುತ್ತಿರುವ ಪ್ರದೇಶಗಳಿಗೆ ಅನುಗುಣವಾಗಿ ಯೋಜನೆಗಳನ್ನು ರೂಪಿಸಿ, ಜನರಿಗೆ ಯಾವುದೇ ತೊಂದರೆ ಆಗದಂತೆ ಕಾಮಗಾರಿಗಳನ್ನು ಸಮಯಕ್ಕೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರಿಂದ ಬರುತ್ತಿರುವ ದೂರುಗಳು ಹಾಗೂ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಸೌಂದರ್ಯೀಕರಣ ಹಾಗೂ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಬೇಕೆಂದು ತಿಳಿಸಿದ ಶಾಸಕ ಭರತ್ ರೆಡ್ಡಿ, ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡುವುದು ಅತ್ಯಂತ ಮುಖ್ಯ ಎಂದು ಹೇಳಿದರು. ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಗರವನ್ನು ಮಾದರಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್. ಆಂಜನೇಯಲು, ನಾಮ ನಿರ್ದೇಶಿತ ಸದಸ್ಯರಾದ ಥಿಯೇಟರ್ ಶಿವು, ರಾಕಿ, ಭರತ್, ಆಯುಕ್ತ ಖಲೀಲಸಾಬ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.