Home ಜಿಲ್ಲೆ ಬೆಂಗಳೂರು ಬಸವಣ್ಣರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಕೈ ಪ್ರತಿಭಟನೆ

ಬಸವಣ್ಣರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಕೈ ಪ್ರತಿಭಟನೆ


ಬೆಂಗಳೂರು, ನ. ೨೩- ೧೨ನೇ ಶತಮಾನದ ಮಹಾನ್ ಸಮಾಜ ಸುಧಾರಕರಾದ ವಿಶ್ವಗುರು ಬಸವಣ್ಣನವರು ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ನಾಡಿನ ಸಾಂಸ್ಕೃತಿಕ ಪರಂಪರೆ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಮೌಲ್ಯಗಳಿಗೆ ಧಕ್ಕೆ ತರುತ್ತಿರುವ ರವಿ ಹಂಜ್ ಮತ್ತು ಅಡ್ಡಾಂಡ ಕಾರ್ಯಪ್ಪ ಅವರ ವರ್ತನೆಯನ್ನು ಖಂಡಿಸಿ, ಅವರನ್ನು ಕೂಡಲೇ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಇಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸಮಾನತೆ, ಮಾನವೀಯತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಇಡೀ ವಿಶ್ವಕ್ಕೆ ಸಾರಿದ ವಿಶ್ವಗುರು ಬಸವಣ್ಣನವರು ಹಾಗೂ ಸತ್ಯ, ಅಹಿಂಸೆ ಮತ್ತು ಶಾಂತಿಯ ಮಾರ್ಗದ ಮೂಲಕ ಜಗತ್ತಿಗೆ ಮಾದರಿಯಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಅವಮಾನಿಸುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳು ಸಮಾಜದಲ್ಲಿ ಅಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವ ಆತಂಕವಿದೆ. ಆದ್ದರಿಂದ ಸಂಬಂಧಪಟ್ಟ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಕಾನೂನಿನ ಚೌಕಟ್ಟಿನಲ್ಲಿ ಗಡಿಪಾರು ಕ್ರಮ ಜರುಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಮನೋಹರ್, ಎ. ಆನಂದ್, ಕುಶಾಲ್ ಹರವೇಗೌಡ, ಸಾಯಿ ನವೀನ್, ಪುಟ್ಟರಾಜು, ಆನಂದ್ ಕುಮಾರ್, ಹೋಬಳೇಶ್, ನಿರಂಜನ್, ಬಾಲಾಜಿ ಡಿ., ಪವನ್, ರಾಮಾಂಜನೇಯ, ಸುರೇಶ್ ಹಾಗೂ ಮಂಜು ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬಸವಣ್ಣ ಮತ್ತು ಗಾಂಧೀಜಿಯವರ ಅಭಿಮಾನಿಗಳು ಭಾಗವಹಿಸಿದ್ದರು. ಪ್ರತಿಭಟನೆಯ ವೇಳೆ ರವಿ ಹಂಜ್ ಮತ್ತು ಅಡ್ಡಾಂಡ ಕಾರ್ಯಪ್ಪ ಅವರ ಪ್ರತಿಕೃತಿಗಳನ್ನು ದಹಿಸುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿ, ನಾಡಿನ ಮಹಾನ್ ಚೇತನಗಳ ಗೌರವ ಮತ್ತು ಘನತೆಯನ್ನು ಕಾಪಾಡಲು ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.