ಗದಗ,ಸೆ.೬-ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಾಗೇರಿ ಓಣಿಯಲ್ಲಿ ಬೀದಿ ನಾಯಿ ದಾಳಿಯಿಂದ ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮನೋಜ್ ಬನ್ನಿ (೪) ಎಂಬಾತನಿಗೆ ಬೀದಿ ನಾಯಿ ದಾಳಿ ಮಾಡಲಾಗಿತ್ತು. ಬಾಲಕನ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿದ್ದವು. ಬಾಲಕನನ್ನು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.
ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವುದನ್ನು ನೋಡಿ ಸಾರ್ವಜನಿಕರು ಆಘಾತಕ್ಕೊಳಗಾಗಿದ್ದಾರೆ. ಮಕ್ಕಳು ಮನೆಯಿಂದ ಹೊರಗೆ ಕಾಲಿಡಲು ಅವಕಾಶವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಮನೆ ಮುಂದೆ ಆಟವಾಡುವ ಸಣ್ಣ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡುತ್ತಿದ್ದರೆ, ಮೂಕ ಪ್ರೇಕ್ಷಕರಾಗಿ ಕುಳಿತಿರುವ ಲಕ್ಷ್ಮೇಶ್ವರ ಪುರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚುತ್ತಿರುವ ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.





















