Home ಜಿಲ್ಲೆ ಮಂಗಳೂರು ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶ ಕೈಬಿಡಲು ಮನವಿ

ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶ ಕೈಬಿಡಲು ಮನವಿ

ಬೈಂದೂರು: ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಅವೈಜ್ಞಾನಿಕವಾಗಿ ಸೇರ್ಪಡೆಗೊಂಡಿರುವ ಸುಮಾರು ೫೫ ಚದರ ಕಿಲೋಮೀಟರ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡುವಂತೆ ಆಗ್ರಹಿಸಿ ದೀಪಕ್ ಕುಮಾರ್ ಶೆಟ್ಟಿ, ಅರುಣ್ ಕುಮಾರ್ ಹಾಗೂ ವೀರಭದ್ರ ಗಾಣಿಗ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು.
ಮುಖ್ಯಮಂತ್ರಿಗಳು ಮನವಿಯನ್ನು ಪರಿಗಣಿಸಿ, ಈ ಕುರಿತು ಶಾಸಕ ಮಂಜುನಾಥ ಭಂಡಾರಿ ಅವರೊಂದಿಗೆ ಚರ್ಚಿಸಿ, ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸೆ.೨೩ರಂದು ಶಾಸಕ ಮಂಜುನಾಥ ಭಂಡಾರಿ ಅವರು ಪೌರಾಡಳಿತ ಸಚಿವ ಹೆಚ್.ಸಿ. ಬಾಲಕೃಷ್ಣ, ಮಾಜಿ ಪೌರಾಡಳಿತ ಸಚಿವ ರಹೀಂ ಖಾನ್ ಹಾಗೂ ಪೌರಾಡಳಿತ ಇಲಾಖೆಯ ಕಾರ್ಯದರ್ಶಿ ಕಾವೇರಿ ಅವರನ್ನು ಭೇಟಿ ಮಾಡಿ, ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಗ್ರಾಮೀಣ ಪ್ರದೇಶಗಳಿಂದ ಸ್ಥಳೀಯರಿಗೆ ಉಂಟಾಗುತ್ತಿರುವ ಸಮಸ್ಯೆಗಳು ಹಾಗೂ ತೊಂದರೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಚಿವರು ಸಮಸ್ಯೆಯ ಕುರಿತು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ, ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಲಾಗಿದೆ.