
ಮಂಗಳೂರು-ನಗರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಲ್ಎಸ್ಡಿ ಮಾರಾಟ ಮಾಡುತ್ತಿದ್ದ ಅಂತರ್ ಜಿಲ್ಲಾ ಡ್ರಗ್ಸ್ ಜಾಲವನ್ನು ಭೇದಿಸಿರುವ ಮಂಗಳೂರು ನಗರ ಅಪರಾಧ ವಿಭಾಗದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ಸುಮಾರು ೩ ಲಕ್ಷ ಮೌಲ್ಯದ ೧೦೦ ಎಲ್ಎಸ್ಡಿ ಸ್ಟ್ರಿಪ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಪಡೀಲ್ನ ನಿಹಾಲ್ ಸ್ಯಾಂಪ್ರೆಸ್ ರೋಡ್ರಿಗಸ್ (೩೦) ಹಾಗೂ ಉರ್ವಸ್ಟೋರ್ನ ಸಿದ್ದಾರ್ಥ ಶೆಟ್ಟಿ (೩೫) ಬಂಧಿತ ಆರೋಪಿಗಳು.
ಆರೋಪಿಗಳು ಬೆಂಗಳೂರಿನಿಂದ ನಿಷೇಧಿತ ಡ್ರಗ್ಸ್ ತಂದು ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿರುವ ಕುರಿತು ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಮಂಗಳವಾರ (ನ.೦೩) ಮಧ್ಯಾಹ್ನ ಪಡೀಲ್ ರೈಲ್ವೆ ಸೇತುವೆ ಬಳಿ ಕಾರ್ಯಾಚರಣೆ ನಡೆಸಿದ ಸಿಸಿಬಿ ತಂಡ ಇಬ್ಬರನ್ನೂ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಬಂಧಿತರಿಂದ ೩ ಲಕ್ಷ ರೂ. ಮೌಲ್ಯದ ೧೦೦ ಎಲ್ಎಸ್ಡಿ ಸ್ಟ್ರಿಪ್ಗಳು ಹಾಗೂ ೩ ಮೊಬೈಲ್ ಫೋನ್ಗಳು ಸೇರಿದಂತೆ ಒಟ್ಟು ೩,೩೫,೦೦,೦೦ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಧಿತ ಆರೋಪಿಗಳಿಬ್ಬರೂ ಹಳೆಯ ಅಪರಾಧ ಹಿನ್ನೆಲೆ ಹೊಂದಿದ್ದಾರೆ. ನಿಹಾಲ್ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿದೆ. ಮತ್ತೊಬ್ಬ ಆರೋಪಿ ಸಿದ್ದಾರ್ಥ ಶೆಟ್ಟಿ ವಿರುದ್ಧ ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ, ಗಲಾಟೆ ಹಾಗೂ ಗಾಂಜಾ ಮಾರಾಟ ಸೇರಿದಂತೆ ಒಟ್ಟು ೯ ಪ್ರಕರಣಗಳು ದಾಖಲಾಗಿವೆ.
ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿಗಳ ಪತ್ತೆಗೆ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ತನಿಖೆ ಮುಂದುವರಿಸಿದ್ದಾರೆ.
























