
ಸಂಜೆವಾಣಿ ನ್ಯೂಸ್
ಮೈಸೂರು: ನ.20:- ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತದೆ. ಈ ಹಿನ್ನಲೆಯಲ್ಲಿ ಯೋಜನೆಗಳನ್ನು ರೂಪಿಸುವಾಗ ಜನರ ಪಾಲ್ಗೊಳ್ಳುವಿಕೆ ಅತಿ ಮುಖ್ಯ ಎಂದು ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಅಧಿಕಾರಿಗಳು ಕಾನೂನು ಬದ್ಧವಾಗಿ ಕೆಲಸ ನಿರ್ವಹಿಸಿದರೆ ಅಭಿವೃದ್ಧಿ ಬಹಳ ಸುಲಭವಾಗಿ ನಡೆಯುತ್ತದೆ. ಜನರ ಬೇಡಿಕೆ ಬಹಳಷ್ಟು ಇರುತ್ತದೆ. ಜನರಿಂದ ಮಾಹಿತಿ ಪಡೆದು ಯೋಜನೆ ರೂಪಿಸುವುದು ಕಷ್ಟಕರವಾಗಿರುತ್ತದೆ. ಆದರಿಂದ ಯೋಜನೆ ರೂಪಿಸುವಾಗ ಯಾವ ವಿಷಯಕ್ಕೆ ಆದ್ಯತೆ ನೀಡಬೇಕು ಎಂಬುದನ್ನು ತಿಳಿಸಲಾಗುವುದು. ಯೋಜನೆ ಅನುಷ್ಠಾನದ ಸಂದರ್ಭದಲ್ಲಿ ಯಾವ ಫಲಾನುಭವಿಗೆ ಆದ್ಯತೆ ನೀಡಬೇಕು ಎಂಬುದನ್ನು ತಿಳಿಸಲಾಗುವುದು ಎಂದರು.
ಜನರ ಪಾಲ್ಗೊಳ್ಳುವಿಕೆ ಯಿಂದ ಜನೋಪಯೋಗಿ ಕೆಲಸ ಮಾಡಬಹುದು ಎಂಬ ಆಶಯದೊಂದಿಗೆ ಸಭೆಗಳನ್ನು ನಡೆಸುತ್ತಿದ್ದು, ಜಿಲ್ಲಾ ಯೋಜನಾ ವಿವರಗಳನ್ನು ಆಯವ್ಯಯಕ್ಕೂ ಮುನ್ನ ಮಾನ್ಯ ಮುಖ್ಯಮಂತ್ರಿಗಳಿಗೆ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು.ಗ್ರಾಮ ಮಟ್ಟದಲ್ಲಿ ಗ್ರಾಮ ಸಭೆಯಲ್ಲಿ ಜನರ ಪಾಲ್ಗೊಳ್ಳುವಿಕೆಯನ್ನು ನೋಡಬಹುದಾಗಿದೆ. ನಗರ ಪ್ರದೇಶದಲ್ಲಿ ಜನರ ಪಾಲ್ಗೊಳ್ಳುವಿಕೆ ಕಾಣುತ್ತಿಲ್ಲ. ಆದರಿಂದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಡಿಸೆಂಬರ್ 6 ರೊಳಗೆ 100 ಮತಗಳಿಗೆ ಇಬ್ಬರನ್ನು ಆಯ್ಕೆ ಮಾಡಿ ನೆಯ್ಬರ್ ವುಡ್ ಗ್ರೂಪ್ ರಚಿಸಿ ನಂತರ ವಾಡ್9 ಸಭೆಗಳನ್ನು ರಚಿಸಿ ನಗರ ಪ್ರದೇಶದ ಯೋಜನೆಗಳನ್ನು ರೂಪಿಸಿ. ಗ್ರಾಮ ಹಾಗೂ ವಾಡ್9 ಸಭೆಗಳಿಂದ ಜನರ ಅಭಿಪ್ರಾಯ ಪಡೆದು ತಾಲ್ಲೂಕು ಮಟ್ಟದ ಯೋಜನೆ ರೂಪಿಸಿ ನಂತರ ಜಿಲ್ಲಾ ಮಟ್ಟದಲ್ಲಿ ಕ್ರೋಢಿಕರಿಸಿ ವರದಿಯನ್ನು ನೀಡಿ. ಜಿಲ್ಲಾ ಯೋಜನಾ ಸಮಿತಿಗಳ ಕಾರ್ಯನಿರ್ವಹಣೆ ಪರಿಣಾಮಕಾರಿಯಾಗಿ ನಡೆದರೆ ಮುಂದಿನ ದಿನಗಳಲ್ಲಿ ಬಹಳಷ್ಟು ಜನರ ಕಷ್ಟಗಳು ಪರಿಹಾರವಾಗುತ್ತದೆ ಎಂದರು.
ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಮಾತನಾಡಿ ಜಿಲ್ಲೆಯ ಪ್ರಗತಿಪರ ಯೋಜನೆಗಳನ್ನು ರೂಪಿಸುವ ಸಲುವಾಗಿ ಈಗಾಗಲೇ ತರಬೇತಿಗಳನ್ನು ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಹಂತದಲ್ಲಿ ಯೋಜನೆ ರೂಪಿಸುವುದು ಬಾಕಿ ಇದ್ದು, ಶೀಘ್ರವಾಗಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಮೈಸೂರು ಜಿಲ್ಲಾ ಪಂಚಾಯತ್ ಯುಕೇಶ್ ಕುಮಾರ್, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಜಿಲ್ಲೆಗಳ ಯೋಜನೆಯ ವಿವರಗಳನ್ನು ವಿವರಿಸಿದರು.
ಸಭೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿ ಮೈಸೂರು ವಿಭಾಗದ ವಿವಿಧ ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




























