
ಬೆಂಗಳೂರು, ಮೇ.೨೭-ಕಳೆದ ೨೪ ಗಂಟೆಗಳಲ್ಲಿ ರಾಜ್ಯದಲ್ಲಿ ೩೭ ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಸಕ್ರಿಯ ಕೇಸ್‌ಗಳ ಸಂಖ್ಯೆ ೮೦ಕ್ಕೆ ಏರಿಕೆಯಾಗಿದೆ. ಇದರ ನಡುವೆ ಮಾಸ್ಕ್ ಧರಿಸುವುದು ಒಳ್ಳೆಯದೆಂದು ಸರ್ಕಾರ ಸಲಹೆ ನೀಡಿದೆ.
ಬೆಂಗಳೂರಿನಲ್ಲಿ ಒಟ್ಟು ೧೮೩ ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ೭೩ ಮಂದಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಶೇಕಡ ೧೯.೩೭ಕ್ಕೆ ಏರಿಕೆಯಾಗಿದೆ.
ಅದೇ ರೀತಿ, ಬೆಂಗಳೂರು ಗ್ರಾಮಾಂತರದಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ. ಇದಲ್ಲದೆ, ದಕ್ಷಿಣ ಕನ್ನಡ, ಮೈಸೂರು, ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಕೊರೊನಾ ಕೇಸ್‌ಗಳು ವರದಿಯಾಗಿವೆ. ದಕ್ಷಿಣ ಕನ್ನಡದಲ್ಲಿ ಒಂದು, ಮೈಸೂರಿನಲ್ಲಿ ಮೂರು, ಮತ್ತು ವಿಜಯನಗರದಲ್ಲಿ ಒಂದು ಪಾಸಿಟಿವ್ ಕೇಸ್ ದಾಖಲಾಗಿದೆ.
ಸರ್ಕಾರದ ಕಟ್ಟುನಿಟ್ಟಿನ ಕ್ರಮಗಳು
ಕೊರೊನಾದ ಹೊಸ ರೂಪಾಂತರದಿಂದ ಉಂಟಾದ ಆತಂಕವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆರೋಗ್ಯ ಇಲಾಖೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಸಿಬ್ಬಂದಿಗೆ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಲು ನಿರ್ದೇಶನ ನೀಡಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ. ಈಗಾಗಲೇ ಆರೋಗ್ಯ ಇಲಾಖೆಯು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ತೀವ್ರಗೊಳಿಸಿದೆ.
ಇನ್ನೊಂದೆಡೆ, ಮೇ ೨೯ ರಿಂದ ರಾಜ್ಯಾದ್ಯಂತ ಶಾಲೆಗಳು ಪುರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ಶೀತ, ಜ್ವರದಂತಹ ಲಕ್ಷಣಗಳಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಎಂದು ಪೋಷಕರಿಗೆ ತಿಳಿಸಿದ್ದಾರೆ.
ಶಾಲೆಗಳು ಕೂಡ ಇಂತಹ ಮಕ್ಕಳಿಗೆ ರಜೆ ನೀಡಬೇಕು ಎಂದು ಸೂಚಿಸಲಾಗಿದೆ. ಈ ಕುರಿತು ಶೀಘ್ರದಲ್ಲೇ ವಿವರವಾದ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮತ್ತೊಬ್ಬರಿಗೆ ಕೊರೊನಾ
ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಬೆಂಗಳೂರಿನ ಗಾಂಧಿನಗರದ ನಿವಾಸಿಯೊಬ್ಬರಲ್ಲಿ ಕೊರೊನಾ ಕಾಣಿಸಿಕೊಂಡಿದೆ. ೪೬ ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಯಾವುದೇ ಪ್ರವಾಸ ಕೈಗೊಳ್ಳಲಿದ್ದರು ಕೋವಿಡ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಅವರು ಓಂ ಐಸ್‌ಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.