
ಸಂಜೆವಾಣಿ ನ್ಯೂಸ್
ಮೈಸೂರು: ಜೂ.05:- ರಾಜ್ಯದಲ್ಲಿ ನಾಲ್ಕೂವರೆ ಅಕ್ರಮ ಕೃಷಿ ಪಂಪ್‍ಸೆಟ್‍ಗಳಿದ್ದು, ಮೂರು ತಿಂಗಳಲ್ಲಿ ಎಲ್ಲವನ್ನೂ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಸೇರಿದಂತೆ ರಾಜ್ಯದಲ್ಲಿ ಒಟ್ಟು 4.5 ಲಕ್ಷ ಅಕ್ರಮ ಕೃಷಿ ಪಂಪ್‍ಸೆಟ್‍ಗಳಿದ್ದು, ಅದರಲ್ಲಿ ಈಗಾಗಲೇ 2.5 ಲಕ್ಷ ಕೃಷಿ ಪಂಪ್ ಸೆಟ್‍ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನೂ ಬಾಕಿ ಇರುವ 2 ಲಕ್ಷ ಕೃಷಿ ಪಂಪ್‍ಸೆಟ್‍ಗಳನ್ನು ಶೀಘ್ರದಲ್ಲಿಯೇ ಸಕ್ರಮಗೊಳಿಸಲಾಗುವುದು.
ವಿದ್ಯುತ್ ಮಾರ್ಗದಿಂದ 500 ಮೀ. ಅಂತರದೊಳಗೆ ಇದ್ದರೆ ಆದಷ್ಟು ಬೇಗ ಸಕ್ರಮಗೊಳಿಸಲಾಗುವುದು. ಇಲ್ಲದೇ ಇದ್ದರೆ ರೈತರು ನವೀಕೃತ ಶೀಘ್ರ ಸಂಪರ್ಕ ಯೋಜನೆಯಡಿ ಸಕ್ರಮ ಮಾಡಿಕೊಳ್ಳಬಹುದು ಎಂದರು.
44 ಉಪ ಕೇಂದ್ರ ಸ್ಥಾಪನೆ:
ವರ್ಷದಿಂದ ವರ್ಷಕ್ಕೆ ಹೆಚ್ಚುವರಿ ವಿದ್ಯುತ್ ಬೇಡಿಕೆ ಹಿನ್ನಲೆಯಲ್ಲಿ ರಾಜ್ಯಾದ್ಯಂತ 100, ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 44 ಉಪ ವಿದ್ಯುತ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಅಗತ್ಯವಿರುವ ಕಡೆಗಳಲ್ಲಿ ಟಿಸಿಗಳನ್ನು ಮೇಲ್ದರ್ಜೇಗೇರಿಸಲಾಗುವುದು. ರಾಜ್ಯದಲ್ಲಿ ವಿದ್ಯುತ್ ಕೊರತೆಯಾಗದಂತೆ ಹೆಚ್ಚುವರಿಯಾಗಿ ವಿದ್ಯುತ್ ಸಿಗುತ್ತಿದೆ. ಕೇಂದ್ರಗಳ ಸ್ಥಾಪನೆಗೆ ಅಗತ್ಯ ಭೂಮಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮಂಡಕಳ್ಳಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಮಾರ್ಗ ಬದಲಿಸಲಾಗುವುದು. ಇದರೊಂದಿಗೆ ಬೇರೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಗತ್ಯ ಇರುವ ಕಡೆ ವಿದ್ಯುತ್ ಮಾರ್ಗ ಬದಲಿಸುವ ಕಾರ್ಯ ನಡೆಸಲಾಗುವುದು. ಈ ಸಂಬಂಧ ಸೆಸ್ಕ್ ಅಧಿಕಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದರು.
ಇಂಧನ ಇಲಾಖೆಯಿಂದ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿನ ಪ್ರಗತಿ ಪರಿಶೀಲನಾ ಸಭೆ ನಡೆಸುವ ಮೂಲಕ ಸಮಸ್ಯೆಗಳನ್ನು ಆಲಿಸುವ ಕಾರ್ಯದೊಂದಿಗೆ ಪರಿಹಾರ ಕಂಡು ಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸುತ್ತಿರುವುದರಿಂದ ಸಮಸ್ಯೆಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಡಿ.ರವಿಶಂಕರ್, ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ಡಿ.ತಿಮ್ಮಯ್ಯ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಸೆಸ್ಕ್ ಎಂಡಿ ಕೆ.ಎಂ.ಮುನಿಗೋಪಾಲರಾಜು ಹಾಜರಿದ್ದರು.