ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯ ಸದ್ಭಳಕೆ ಮಾಡಿಕೊಳ್ಳಿ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.23:-
ವಿದ್ಯಾರ್ಥಿಗಳು ಸರ್ಕಾರದ ವಿವಿಧ ಯೋಜನೆಗಳಡಿ ದೊರೆಯುವ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರುವಂತೆ ನಗರಸಭೆ ಪೌರಾಯುಕ್ತ ಎಸ್. ವಿ. ರಾಮದಾಸ್ ಅವರು ಸಲಹೆ ಮಾಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿಂದು ಭಾರತ ಸರ್ಕಾರದ ಮೇರಾ ಯುವ ಭಾರತ್, ನಗರಸಭೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಭಾರತೀಯ ಅಂಚೆ ಇಲಾಖೆ, ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಪ್ರಮುಖ ಕಾರ್ಯಕ್ರಮಗಳ ಕುರಿತು ಕಾರ್ಯಗಾರ’ ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲಗೊಳಿಸಲು ಸರ್ಕಾರವು ಉಚಿತ ಶಿಕ್ಷಣ, ವಸತಿ, ಪೌಷ್ಟಿಕ ಆಹಾರ, ಸಮವಸ್ತ್ರ. ವಿದ್ಯಾರ್ಥಿ ವೇತನ, ವಿದ್ಯಾರ್ಥಿನಿಯರಿಗೆ ಉಚಿತ ಸಾರಿಗೆ ಹಾಗೂ ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿದೆ. ಅವುಗಳನ್ನು ಸದ್ಭಳಕೆ ಮಾಡಿಕೊಂಡು ಮುಖ್ಯ ವಾಹಿನಿಗೆ ಬರುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಜಿಲ್ಲಾ ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹಮದ್ ಅಕ್ಬರ್ ಅವರು ಮಾತನಾಡಿ ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಜಿಲ್ಲಾ ಆಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೊಂದಣಿ ಮಾಡಿ ನಿರುದ್ಯೋಗ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅಲ್ಲದೆ, ಜಿಲ್ಲೆಯ ಎಲ್ಲಾ ಕಾಲೇಜುಗಳಿಗೆ ಭೇಟಿ ನೀಡಿ ಕೌಶಲ್ಯ ಅಭಿವೃದ್ಧಿಗೆ ಸಂಬಂಧಪಟ್ಟ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಅಂಚೆ ಇಲಾಖೆ ನಿರೀಕ್ಷಕ ಶ್ರೀಧರ್ ಅವರು ಮಾತನಾಡಿ ಕೇಂದ್ರ ಸರ್ಕಾರದ ಪ್ರಮುಖ ಸೌಲಭ್ಯಗಳನ್ನು ಇದುವರೆಗೆ 40,000 ಜನರಗಳಿಗೆ ಕಲ್ಪಿಸಲಾಗಿದೆ. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಪರೀಕ್ಷೆ ಉತ್ತೀರ್ಣರಾಗಿದ್ದರೆ ಗ್ರಾಮೀಣ ಅಂಚೆ ಕೆಲಸಕ್ಕೆ ಅರ್ಜಿ ಹಾಕಬಹುದು ಎಂದು ಹೇಳಿದರು.

ಅಂಚೆ ಇಲಾಖೆಯು ಹಿರಿಯ ನಾಗರಿಕರಿಗೆ ವಿವಿಧ ಉಳಿತಾಯ ಯೋಜನೆಗಳು, ವಿಮಾ ಯೋಜನೆಗಳನ್ನು ಜಾರಿಗೊಳಿಸಿದೆ. ಭಾರತ ಸರ್ಕಾರವು ಅಂಚೆ ಇಲಾಖೆಯ ಮೂಲಕ ಗ್ರಾಮೀಣ ಪ್ರದೇಶದವರಿಗೆ ‘ಇಂದಿನ ಉಳಿತಾಯ ನಾಳಿನ ಭದ್ರತೆ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಚಾಮರಾಜನಗರ ಎಸ್.ಬಿ.ಐ. ರುಡ್‍ಸೆಟ್ ನಿರ್ದೇಶಕ ರಾಕೇಶ್ ಅಕುಲ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಬ್ಯಾಂಕ್‍ಗಳಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಮಾದಾಪುರ ಗ್ರಾಮದಲ್ಲಿ ಲೀಡ್ ಬ್ಯಾಂಕ್ ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗೆ ಉಚಿತ ಬ್ಯೂಟಿ ಪಾರ್ಲರ್, ಕಂಪ್ಯೂಟರ್ ತರಬೇತಿಗಳನ್ನು ಹಮ್ಮಿಕೊಂಡಿದೆ. ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ತಕ್ಕಂತೆ ಶಿಕ್ಷಣ ಸಾಲ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ತಮ್ಮ ಸಮೀಪದ ಬ್ಯಾಂಕುಗಳನ್ನು ಸಂಪರ್ಕಿಸಿ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಆರ್.ಎಸ್. ಅಶ್ವಿನಿ ಅವರು ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ. ಬಂಗಾರು ರಸಪ್ರಶ್ನೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.
ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲೇಶ್. ಮೇರಾ ಯುವ ಭಾರತ್ ಜಿಲ್ಲಾ ಯೋಜನೆ ಅಧಿಕಾರಿ ಪಿ. ಅಖಿಲ್, ಸಹನ, ಕಾಲೇಜಿನ ಉಪನ್ಯಾಸಕರಾದ ಎ.ಸಿ. ಚಂದ್ರಶೇಖರ್, ಮಲ್ಲೇಶ್, ದೀಪಕ್, ಕ್ರೀಡಾಪಟು ಕಾರ್ತಿಕ್ ನಾಯಕ್, ಇತರರು ಇದ್ದರು.