Home ಜಿಲ್ಲೆ ಶಿಕ್ಷಕರ ಕ್ಷೇತ್ರದ ಚುನಾವಣೆ : ಅ.23 ರವರೆಗೆ ಶುಷ್ಕ ದಿನ ಘೋಷಣೆ

ಶಿಕ್ಷಕರ ಕ್ಷೇತ್ರದ ಚುನಾವಣೆ : ಅ.23 ರವರೆಗೆ ಶುಷ್ಕ ದಿನ ಘೋಷಣೆ

ಸಂಜೆವಾಣಿ ವಾರ್ತೆ

ಹೊಸಪೇಟೆ.ಅ.22 ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ  ಮತದಾನ ಪ್ರಕ್ರಿಯೆಯು ಶಾಂತಿಯುತವಾಗಿ ನಡೆಯಲು ಹಾಗೂ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ  ಜಿಲ್ಲೆಯಾದ್ಯಂತ ಅಕ್ಟೋಬರ್ 21ರ ಸಂಜೆ 4 ಗಂಟೆಯಿಂದ ಅಕ್ಟೋಬರ್ 23ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ  ಶುಷ್ಕ ದಿನ (ಡ್ರೈ ಡೇ) ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಜಿಲ್ಲೆಯ ಎಲ್ಲ ಮದ್ಯದ ಅಂಗಡಿಗಳು ಹಾಗೂ ಮದ್ಯ ಮಾರಾಟಕ್ಕೆ ಪರವಾನಗಿ ಹೊಂದಿರುವ ಸನ್ನದುಗಳನ್ನು ಮುಚ್ಚಬೇಕು. ಮದ್ಯದ ಮಾರಾಟ, ಹಂಚಿಕೆ ಮತ್ತು ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಚುನಾವಣಾ ಪ್ರಕ್ರಿಯೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಮತದಾನವು ಶಾಂತಿಯುತವಾಗಿ ಜರುಗುವುದನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ.

ನಿಯಮ ಉಲ್ಲಂಘಿಸಿದವರ ವಿರುದ್ಧ ಜನಪ್ರತಿನಿಧಿ ಕಾಯ್ದೆ, 1951ರ ಸೆಕ್ಷನ್ 135(ಸಿ) ಹಾಗೂ ಕರ್ನಾಟಕ ಅಬಕಾರಿ ನಿಯಮಗಳ ಅನ್ವಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.