
ಸಂಜೆವಾಣಿ ನ್ಯೂಸ್
ಮೈಸೂರು: ಅ.09:– ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆದಿರುವುದನ್ನು ಖಂಡಿಸಿ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ನ್ಯಾಯಾಲಯ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಜಮಾವಣೆಗೊಂಡ ವಕೀಲರು ಶೂ ತೂರಿದ ವಕೀಲ ರಾಕೇಶ್ ಕಿಶೋರ್ ಭಾವಚಿತ್ರ ಹರಿದು, ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಲೋಕೇಶ್ ಮಾತನಾಡಿ, ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಹಿರಿಯ ವಕೀಲ ರಾಕೇಶ್ ಕಿಶೋರ್ ಶೂ ಎಸೆದಿರುವುದು ಖಂಡನೀಯ. ವಕೀಲರು ನ್ಯಾಯಾಂಗ ವ್ಯವಸ್ಥೆಯ ಹೃದಯಭಾಗ. ಇದು ನ್ಯಾಯಾಂಗ ವ್ಯವಸ್ಥೆಗೆ, ಸಂವಿಧಾನಕ್ಕೆ ಆಗಿರುವ ಗಾಯ ಎಂದು ಕಿಡಿ ಕಾರಿದರು.
ವಕೀಲರ ಸಂಘದಲ್ಲಿ ಸಭೆ ನಡೆಸಿ ರಾಕೇಶ್ ಕಿಶೋರ್ ಕೃತ್ಯ ಖಂಡಿಸಲಾಗಿದೆ. ನ್ಯಾಯಮೂರ್ತಿ ಗವಾಯಿ ಅವರು ಈ ಘಟನೆಯಿಂದ ದೃತಿಗೆಡಬಾರದು, ಅವರೊಂದಿಗೆ ನಾವಿದ್ದೇವೆ. ರಾಕೇಶ್ ಕಿಶೋರ್ ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ರಾಷ್ಟ್ರಪತಿ, ಪ್ರಧಾನಿ, ಗೃಹಸಚಿವರಿಗೆ ಪತ್ರ ಬರೆಯಲಾಗಿದೆ. ಅವರನ್ನು ಯಾರಾದರು ರಕ್ಷಣೆ ಮಾಡಲು ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘದ ಉಪಾಧ್ಯಕ್ಷ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ಚರಣ್‍ರಾಜ್‍ಕುಮಾರ್, ಸುದೀರ್, ಪುನೀತ್ ಸೇರಿ ನೂರಾರು ವಕೀಲರು ಭಾಗವಹಿಸಿದ್ದರು.






























