
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಭಾಭವನದಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು ಮಾತನಾಡಿ, ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು. ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಆರೋಗ್ಯಕರ ಜೀವನಶೈಲಿ, ಉತ್ತಮ ಮೌಲ್ಯಗಳು ಹಾಗೂ ಜವಾಬ್ದಾರಿಯುತ ನಡವಳಿಕೆಯಿಂದ ಸಮಾಜಕ್ಕೆ ಮಾದರಿಯಾಗಬೇಕು ಎಂದರು. ಬಳಿಕ ಅವರು ’ನಶಾ ಮುಕ್ತ ಭಾರತ’ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಪ್ರಥಮ ಎಂಸಿಎ ತರಗತಿಯ ಜೆವಿಟಾ ಮತ್ತು ಬಳಗದವರು ಪ್ರಾರ್ಥಿಸಿ, ಕಾಲೇಜಿನ ಡ್ಯಾಪ್ಸ್ ಘಟಕ ಮತ್ತು ಐಕ್ಯುಎಸಿಯ ಸಂಯೋಜಕ ಡಾ. ಎಡ್ವಿನ್ ಎಸ್ ಡಿಸೋಜ ಸ್ವಾಗತಿಸಿದರು. ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ವಿನಯಚಂದ್ರ ವಂದಿಸಿದರು. ಎಂಸಿಎ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಕ್ಷತಾ ಬಿ ಕಾರ್ಯಕ್ರಮ ನಿರೂಪಿಸಿದರು.

































