Home ಜಿಲ್ಲೆ ಮೈಸೂರು ಅಧಿಕಾರಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಪಟ್ಟಣ ಪಂ ಕಾರ್ಯನಿರ್ವಹಣೆ ಕುಂಠಿತ

ಅಧಿಕಾರಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಪಟ್ಟಣ ಪಂ ಕಾರ್ಯನಿರ್ವಹಣೆ ಕುಂಠಿತ

ಸಂಜೆವಾಣಿ ವಾರ್ತೆ
ಹನೂರು ಏ 11 :-
ಪಟ್ಟಣದ ಅಭಿವೃದ್ಧಿ ಕಾರ್ಯಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಪಟ್ಟಣ ಪಂಚಾಯಿತಿ ಕಾರ್ಯನಿರ್ವಹಣೆ ಕುಂಠಿತಗೊಂಡಿದೆ ಎಂದು ಆರೋಪಿಸಿ ಶಾಸಕ ಎಂ.ಆರ್ ಮಂಜುನಾಥ್ ಅವರು ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.


ಹನೂರು ಪಟ್ಟಣ ಪಂಚಾಯಿತಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸದ ಕಾರಣ ಪ.ಪಂ. ವ್ಯವಸ್ಥೆ ಅಧೋಗತಿಗೆ ಇಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.


ಕಾವೇರಿ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಂಡರೆ ಕೊಳವೆಬಾವಿಗಳ ಅವಶ್ಯಕತೆ ಬಹುಪಾಲು ಕಡಿಮೆಯಾಗಬಹುದಾದರೂ, ಅದನ್ನು ಸರಿಯಾಗಿ ನಿರ್ವಹಿಸಲಾಗುತ್ತಿಲ್ಲ ಎಂದು ಅವರು ದೂರಿದರು. ಜನರಿಗೆ ನಿರಂತರವಾಗಿ ಕುಡಿಯುವ ನೀರು ಪೂರೈಸುವಲ್ಲಿ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಬಾಡಿಗೆ,ಕಂದಾಯ ಸಂಗ್ರಹದಲ್ಲೂ ಲೋಪಗಳಿದ್ದು, ಕಂದಾಯ ಕಟ್ಟಲು ಬಂದವರಿಂದ ಸರಿಯಾಗಿ ವಸೂಲಿ ಮಾಡದ ಸ್ಥಿತಿ ನಿರ್ಮಾಣವಾಗಿದೆ ಅಧಿಕಾರಿಗಳು ತಮ್ಮದೇ ಆದ ವ್ಯವಸ್ಥೆ ಮಾಡಿಕೊಂಡು ನಿಯಮಾನುಸಾರ ಕೆಲಸ ಮಾಡದೆ ಮನಬಂದಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಸಾರ್ವಜನಿಕ ದೂರುಗಳನ್ನೂ ಅವರು ಸಭೆಯಲ್ಲಿ ಉಲ್ಲೇಖಿಸಿದರು.


ಇ-ಸ್ವತ್ತು ಕಾರ್ಯಾಚರಣೆಯಲ್ಲಿ ಅಕ್ರಮಗಳು ನಡೆದಿರುವ ಕುರಿತು ಸಾರ್ವಜನಿಕರಿಂದ ಆಧಾರ ಸಹಿತ ದೂರುಗಳು ಬಂದಿದೆ ಈ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ತಕ್ಷಣ ಕ್ರಮ ಕೈಗೊಳ್ಳಲು ಮುಖ್ಯಾಧಿಕಾರಿಗೆ ಸೂಚನೆ ನೀಡಿದರು , ದುಡ್ಡು ಕೊಡುವ ಬೀದಿಗೆ ನೀರು ಹೋಗುತ್ತದೆ ಎಂಬ ರೀತಿಯ ಸಾರ್ವಜನಿಕ ಆರೋಪಗಳು ಕೇಳಿ ಬರುತ್ತಿದೆ ಮೂರು ತಿಂಗಳಿಗೊಮ್ಮೆ ಬೋರ್‍ವೆಲ್‍ಗಳು ಹಾಳಾಗುತ್ತಿರುವುದು ಏಕೆ ಎಂಬ ಪ್ರಶ್ನಿಸಿದರು.


ಈ ಸಂದರ್ಭದಲ್ಲಿ ಜಿಲ್ಲಾ ಯೋಜನಾ ನಿರ್ದೇಶಕ ವೆಂಕಟೇಶ್, ತಹಸೀಲ್ದಾರ್ ಚ್ಯೆತ್ರಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಆರೋಗ್ಯಾಧಿಕಾರಿ ಪ್ರಕಾಶ್, ಇಂಜಿನಿಯರ್ ನಾಗರಾಜ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.